ಶೇ.80ರಷ್ಟು ಗ್ರಾ.ಪಂ. ಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಕಾಯತಂತ್ರ: ನಳಿನ್ ಕುಮಾರ್

Update: 2020-11-23 12:42 GMT

ಬೆಂಗಳೂರು, ನ. 23: ರಾಜ್ಯ ಬಿಜೆಪಿ ಗ್ರಾಮ ಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಶೇ.80ರಷ್ಟು ಗ್ರಾಮ ಪಂಚಾಯತ್ಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಅಗತ್ಯ ಕಾರ್ಯತಂತ್ರ ರೂಪಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮ ಸ್ವರಾಜ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಎಲ್ಲ ಕಡೆಗಳಲ್ಲಿ ಸಮಾವೇಶ ನಡೆಸಲಾಗುವುದು. ಎಲ್ಲ ಸಮುದಾಯಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಪಕ್ಷ ಕೆಲಸ ನಿರ್ವಹಿಸಲಿದೆ ಎಂದರು.

ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಂದು ಸಮಾವೇಶ ನಡೆಯುತ್ತದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮುನ್ನಡೆಸಲಿದ್ದು, ಸಚಿವರಾದ ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್, ಅಶೋಕ್, ಡಿಸಿಎಂ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದರು.

ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಗ್ರಾಮೀಣ ಪ್ರದೇಶದ ಕಲ್ಯಾಣಕ್ಕೆ ಪ್ರಧಾನಿ ಮೋದಿಯವರು ಹೆಚ್ಚಿನ ನೆರವು ನೀಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರೂ ಗ್ರಾಮೀಣಾಭಿವೃದ್ಧಿಗೆ ಅನುದಾನ ನೀಡಿದ್ದಾರೆ. ಪ್ರವಾಹಕ್ಕೆ ಹೆಚ್ಚಿನ ನೆರವು ಸಿಕ್ಕಿದೆ. ಗ್ರಾಪಂ ಚುನಾವಣೆಗಳು ಬಂದಿವೆ, ಇಲ್ಲಿ ಪಕ್ಷದ ಚಿಹ್ನೆ ಇಲ್ಲದಿರಬಹುದು. ಆದರೆ ಚುನಾವಣೆಯಲ್ಲಿ ಪಕ್ಷದ ಬೆಂಬಲ ಇರುತ್ತದೆ ಎಂದರು.

ರಾಜ್ಯದಲ್ಲಿನ 5,810 ಗ್ರಾಮ ಪಂಚಾಯತ್ಗಳಿಗೆ ಚುನಾವಣೆ ನಡೆಯುತ್ತಿದೆ. ಗ್ರಾಮೀಣ ಜನರ ಮನಸ್ಸನ್ನು ಗೆದ್ದವರಿಗೆ ಟಿಕೆಟ್ ನೀಡಲಾಗುತ್ತದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಅಂತವರಿಗೆ ಅವಕಾಶ ನೀಡಲಾಗುತ್ತದೆ. ಈ ಚುನಾವಣೆ ಮುಂದಿನ ಚುನಾವಣೆಗೆ ಬೇಸ್ ಆಗಲಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News