ಕೋವಿಡ್ ನಿಯಮ ಉಲ್ಲಂಘಿಸಿದ ರಾಜಕೀಯ ಪಕ್ಷಗಳಿಗೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್

Update: 2020-11-24 11:50 GMT

ಬೆಂಗಳೂರು, ನ.24: ಸುರಕ್ಷಿತ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಸೇರಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದ ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆಯಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ರಾಜಕೀಯ ಪಕ್ಷಗಳು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವ ಕುರಿತು ಪೀಠಕ್ಕೆ ಮಾಹಿತಿ ನೀಡಿದರು. ಇದನ್ನು ದಾಖಲಿಸಿಕೊಂಡ ಪೀಠ ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳಾಗಿ ಅರ್ಜಿಯಲ್ಲಿ ಸೇರಿಸಿ, ತಿದ್ದುಪಡಿ ಮಾಡಲು ಅರ್ಜಿದಾರರಿಗೆ ಒಂದು ವಾರ ಕಾಲಾವಕಾಶ ನೀಡಿತು. ಅಲ್ಲದೇ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಸಿಪಿಐ(ಎಮ್) ಹಾಗೂ ಕನ್ನಡ ಚಳವಳಿ ವಾಟಾಳ್ ಪಕ್ಷಗಳಿಗೆ ನೋಟಿಸ್ ಜಾರಿ ಮಾಡಿ, ಡಿ.2ಕ್ಕೆ ವಿಚಾರಣೆ ಮುಂದೂಡಿತು.

ಇದೇ ವೇಳೆ, ರಾಜಕೀಯ ಪಕ್ಷಗಳು ಕೋವಿಡ್ ನಿಯಮಗಳನ್ನು ಪಾಲಿಸುವುದು ಅವುಗಳ ಜವಾಬ್ದಾರಿ. ಹೀಗಾಗಿ ನಿಯಮಗಳನ್ನು ಪಾಲಿಸಲು ಸರಕಾರಕ್ಕೆ ಸಹಕಾರ ನೀಡಬೇಕು. ಪಕ್ಷದ ಬೆಂಬಲಿಗರು ಹಾಗೂ ಕಾರ್ಯಕರ್ತರು ನಿಯಮಗಳನ್ನು ಉಲ್ಲಂಘಿಸದಂತೆ ಸೂಚಿಸಬೇಕು. ಈ ಕುರಿತು ಪಕ್ಷಗಳು ಲಿಖಿತವಾಗಿ ತಮ್ಮ ಸ್ಪಷ್ಟನೆ ಸಲ್ಲಿಸಬೇಕು ಎಂದು ನಿರ್ದೇಶಿಸಿತು.

ಇನ್ನು ರಾಜ್ಯ ಸರಕಾರ ಕೋವಿಡ್ ನಿಯಮಗಳನ್ನು ಜಾರಿ ಮಾಡಲು ಕೈಗೊಂಡಿರುವ ಕ್ರಮಗಳ ಕುರಿತು ಹಾಗೂ ಈವರೆಗೆ ವಿಧಿಸಿರುವ ದಂಡದ ವಿವರಗಳನ್ನು ಸಲ್ಲಿಸುವಂತೆಯೂ ನಿರ್ದೇಶಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News