ಚುನಾವಣೆಗೂ ಮುನ್ನವೇ 'ನಾನು ಸಚಿವ ಸ್ಥಾನದ ಆಕಾಂಕ್ಷಿ' ಎಂದ ಪ್ರತಾಪ್ ಗೌಡ ಪಾಟೀಲ್

Update: 2020-11-24 13:00 GMT

ಬೆಂಗಳೂರು, ನ.24: ಮುಂಬರುವ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಉಪಚುನಾವಣೆಯ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್, ಚುನಾವಣೆಯಲ್ಲಿ ಗೆಲ್ಲುವ ಮುನ್ನವೆ ತಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಾಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎಲ್ಲ 17 ಶಾಸಕರಿಗೂ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು. ಮುಖ್ಯಮಂತ್ರಿ ಆ ಭರವಸೆ ಈಡೇರಿಸುತ್ತಾರೆ ಅನ್ನೋ ನಂಬಿಕೆಯಿದೆ ಎಂದರು.

ನಾನು ಹಣಕ್ಕಾಗಿ ಬಿಜೆಪಿಗೆ ಬಂದಿಲ್ಲ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಮೆಚ್ಚಿ ಬಿಜೆಪಿಗೆ ಬಂದಿದ್ದೇನೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ. ನಾವೆಲ್ಲರೂ ಒಟ್ಟಾಗಿ ಇದ್ದೇವೆ, ಎಲ್ಲರೂ ಚುನಾವಣಾ ಪ್ರಚಾರಕ್ಕೆ ಬರುತ್ತಾರೆ. ಬಸನಗೌಡ ತುರುವಿಹಾಳ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದರಿಂದ ಯಾವುದೆ ಬದಲಾವಣೆಯಾಗುವುದಿಲ್ಲ. ಕಳೆದ ಬಾರಿಯ ಚುನಾವಣೆಯಲ್ಲಿ ಅವರು ಪಡೆದಿದ್ದ ಮತಗಳು ಬಿಜೆಪಿಯದ್ದು, ಆದುದರಿಂದ ಜನ ನನ್ನನ್ನು ಗೆಲ್ಲಿಸುತ್ತಾರೆ ಎಂದು ಪ್ರತಾಪ್ ಗೌಡ ಪಾಟೀಲ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News