​‘ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಕಂಡುಬಂದಲ್ಲಿ ಕಾನೂನು ಕ್ರಮ’

Update: 2020-11-24 13:36 GMT

ಉಡುಪಿ, ನ.24: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾರೇ ಆಗಲಿ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವುದು, ಬಳಕೆ ಮಾಡುವುದು ಕಂಡುಬಂದರೆ ಅಂಥ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ನಗರಸಭಾ ಆಯುಕ್ತ ಆನಂದ ಕಲ್ಲೋಳಿಕರ್ ತಿಳಿಸಿದ್ದಾರೆ.

ಯಾವುದೇ ವ್ಯಕ್ತಿ,ಅಂಗಡಿ ಮಾಲಕ, ಮಾರಾಟಗಾರ, ಸಗಟು ಮಾರಾಟಗಾರ ಅಥವಾ ಚಿಲ್ಲರೆ ವ್ಯಾಪಾರಿ ಯಾವುದೇ ದಪ್ಪದ ಅಥವಾ ಯಾವುದೇ ರೀತಿಯ ಪ್ಲಾಸ್ಟಿಕ್ ಚೀಲಗಳು, ನಾನ್ ಓವೆನ್ ಚೀಲಗಳು, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್ಸ್, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ, ಥರ್ಮೋಕೂಲ್ ಮತ್ತು ಪ್ಲಾಸ್ಟಿಕ್ ಮೈಕೋ ಬೀಡ್ಸ್‌ನಿಂದ ತಯಾರಾದ ವಸ್ತು ಗನ್ನು ಬಳಕೆ, ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಾಣಿಕೆ, ಮಾರಾಟ ಮತ್ತು ವಿತರಣೆ ಮಾಡುವುದನ್ನು ರಾಜ್ಯಾದ್ಯಂತ ನಿಷೇಧಿಸಲಾಗಿದೆ.

ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡುವುದು ಕಂಡುಬಂದಲ್ಲಿ ಪ್ರಥಮ ಬಾರಿಗೆ 1000 ರೂ., ದ್ವಿತೀಯ ಬಾರಿಗೆ 2000 ರೂ., ದಂಡವನ್ನು ವಿಧಿಸಿ ನಿಷೇಧಿತ ಪ್ಲಾಸಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತದೆ. ಮೂರನೇ ಬಾರಿಗೆ ಅಂಥವರ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ನಗರಸಭಾ ವ್ಯಾಪ್ತಿಯ ವಿಶ್ವೇಶ್ವರಯ್ಯ ದಿನವಹಿ ಮಾರುಕಟ್ಟೆ, ಸಂತೆಕಟ್ಟೆ ಮಾರುಕಟ್ಟೆ, ಪರ್ಕಳ ಮಾರುಕಟ್ಟೆ, ಆದಿ ಉಡುಪಿಯ ಎಪಿಎಂಸಿ ಮಾರುಕಟ್ಟೆ ಮತ್ತು ಬೀದಿ ಬದಿ ವ್ಯಾಪಾರಸ್ಥರಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಕಂಡುಬಂದಿದ್ದು, ಇಂಥ ಎಲ್ಲಾ ವ್ಯಾಪಾರಸ್ಥರಿಗೆ ವಿಧಿಸುವ ದಂಡವನ್ನು ನೇರವಾಗಿ ಸುಂಕ ವಸೂಲಿ ಮಾಡುವ ಗುತ್ತಿಗೆದಾರರಿಂದ ವಸೂಲಿ ಮಾಡಲಾಗು ತ್ತದೆ. ಮತ್ತು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News