ಸಾಮಾಜಿಕ-ಆರ್ಥಿಕ ಸಮೀಕ್ಷೆ ವರದಿಗೆ ಶೀಘ್ರವೇ ತಾರ್ಕಿಕ ಅಂತ್ಯ: ಜಯಪ್ರಕಾಶ್ ಹೆಗ್ಡೆ

Update: 2020-11-26 16:45 GMT

ಬೆಂಗಳೂರು, ನ.26: ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕ ರಾಜ್ಯದಲ್ಲಿ 160 ಕೋಟಿ ರೂ.ಗಳಷ್ಟು ವೆಚ್ಚದಲ್ಲಿ ಸಿದ್ಧಪಡಿಸಿರುವ ಎಲ್ಲ ಸಮುದಾಯಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ನೂತನ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಇಲ್ಲಿನ ವಸಂತ ನಗರದಲ್ಲಿರುವ ದೇವರಾಜ ಅರಸು ಭವನದಲ್ಲಿಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಅವರು ಮಾತನಾಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ಪಿ.ವಸಂತ ಕುಮಾರ್ ರಿಂದ ಹೂಗುಚ್ಚ ಸ್ವೀಕರಿಸುವ ಮೂಲಕ ಅಧಿಕಾರ ವಹಿಸಿಕೊಂಡರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸರಕಾರಕ್ಕೆ ಇನ್ನೂ ಸಲ್ಲಿಸಿಲ್ಲ. ಈ ಸಂಬಂಧ ಪರಾಮರ್ಶೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ವರದಿಯನ್ನು ಒಪ್ಪಿಕೊಳ್ಳುವುದು ಮತ್ತು ಅದನ್ನು ಜಾರಿ ಮಾಡುವುದು ರಾಜ್ಯ ಸರಕಾರಕ್ಕೆ ಬಿಟ್ಟ ವಿಚಾರ ಎಂದರು.

ಸಮಾಜದ ಮುಖ್ಯವಾಹಿನಿಯಿಂದ ದೂರ ಉಳಿದಿರುವ ಸಣ್ಣ-ಪುಟ್ಟ ಜಾತಿಗಳನ್ನು ಗುರುತಿಸುವ ಕೆಲಸವನ್ನು ಮಾಡುತ್ತೇನೆ ಎಂದ ಅವರು, ಚಿನ್ನಪ್ಪರೆಡ್ಡಿ, ಪ್ರೊ.ರವಿವರ್ಮ ಕುಮಾರ್ ಸೇರಿದಂತೆ ಹಿಂದುಳಿದ ವರ್ಗಗಳ ಆಯೋಗದ ಹಿಂದಿನ ಎಲ್ಲ ಅಧ್ಯಕ್ಷರುಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಎಂದು ಜಯಪ್ರಕಾಶ್ ಹೆಗ್ಡೆ ಸ್ಮರಿಸಿದರು.

ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಕರ್ನಾಟಕ ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಅಲ್ಲದೆ, ನಮ್ಮ ಆಯೋಗ ಸಮೀಕ್ಷಾ ವರದಿಯನ್ನು ಆಧರಿಸಿ ಕೆಲ ಮಾಹಿತಿಯನ್ನು ಕೋರಿದೆ ಎಂದು ಜಯಪ್ರಕಾಶ್ ಹೆಗ್ಡೆ ಇದೇ ವೇಳ ತಿಳಿಸಿದರು.

ಗೊಂದಲ ನಿವಾರಣೆ: ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಕೆಲ ಸಮುದಾಯಗಳ ಇಲ್ಲ. ಹೀಗಾಗಿ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನೀಟ್ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ವಿಚಾರಕ್ಕೆ ಸಂಬಂಧಿಸಿದಂತೆ ಗೊಂದಲವಿದ್ದು, ಇದನ್ನು ಶೀಘ್ರದಲ್ಲೇ ಚರ್ಚಿಸಿ ಪರಿಹರಿಸಲಾಗುವುದು ಎಂದು ತಿಳಿಸಿದರು.

ಹಿಂದುಳಿದ ವರ್ಗಗಳ ಪಟ್ಟಿಗೆ ಕೆಲ ಸಮುದಾಯಗಳ ಸೇರ್ಪಡೆಗೆ ಮನವಿಗಳು ಬರುತ್ತಿವೆ. ಈ ಸಂಬಂಧ ಕ್ಷೇತ್ರ ಅಧ್ಯಯನದ ಜೊತೆಗೆ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಸಣ್ಣ-ಪುಟ್ಟ ಜಾತಿಗಳನ್ನು ಗುರುತಿಸುವ ಕೆಲಸವನ್ನು ಆಯೋಗದಿಂದ ಮಾಡುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪವರರು ತನಗೆ ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಸ್ಥಾನವನ್ನು ನೀಡುವ ಮೂಲಕ ಸಮುದಾಯಕ್ಕೆ ರಾಜಕೀಯೇತರವಾಗಿ ಕೆಲಸ ಮಾಡಲು ಉತ್ತಮ ಅವಕಾಶ ಕಲ್ಪಿಸಿದ್ದಾರೆ. ಈ ಹಿಂದೆ ಮೀನುಗಾರಿಕೆ ಇಲಾಖೆಯಲ್ಲಿ ಕೆಲಸ ನಿರ್ವಹಿಸಿದಂತೆ ಎಲ್ಲರೂ ಗುರುತಿಸುವಂತಹ ರೀತಿಯಲ್ಲಿ ಶ್ರಮಿಸುತ್ತೇನೆ ಎಂದು ಜಯಪ್ರಕಾಶ್ ಹೆಗ್ಡೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News