ಸಂಪುಟ ವಿಸ್ತರಣೆ, ಪುನರ್ ರಚನೆ ಗೊಂದಲ: ಶುಕ್ರವಾರ ಸಿಎಂ ಅಧ್ಯಕ್ಷತೆಯಲ್ಲಿ ಸಂಪುಟ ಸಭೆ

Update: 2020-11-26 11:59 GMT

ಬೆಂಗಳೂರು, ನ. 26: ಸಂಪುಟ ವಿಸ್ತರಣೆ ಮತ್ತು ಪುನರ್ ರಚನೆ ಸೇರಿದಂತೆ ಇನ್ನಿತರ ವಿಚಾರಗಳ ಚರ್ಚೆಗೆ ನಾಳೆ(ನ.27) ಬೆಳಗ್ಗೆ 10:30ಕ್ಕೆ ವಿಧಾನಸೌಧ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ಕರೆಯಲಾಗಿದೆ.

ಸಂಪುಟ ವಿಸ್ತರಣೆ ಸಂಬಂಧ ಬಿಜೆಪಿಯ ಮೂಲ ಮತ್ತು ವಲಸಿಗರ ಮಧ್ಯೆ ಜಟಾಪಟಿ ನಡೆದಿದ್ದು, ಪರ-ವಿರೋಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಮಧ್ಯೆ ಪಕ್ಷದ ವರಿಷ್ಟರು ಸಚಿವ ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ತೋರಿಸಿದ ಹಿನ್ನೆಲೆಯಲ್ಲಿ ನಾಳೆ ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿರುವ ಮಹತ್ವ ಪಡೆದುಕೊಂಡಿದೆ.

ಕಳೆದ ಬಾರಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಂಪುಟದಿಂದ ಕೈಬಿಡುವ ಕೆಲ ಸಚಿವರ ಹೆಸರುಗಳನ್ನು ಸುಳಿವು ನೀಡಿದ್ದರು. ಒಂದು ವೇಳೆ ಬಿಜೆಪಿಯ ರಾಷ್ಟ್ರೀಯ ನಾಯಕರಿಂದ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಅವಕಾಶ ನೀಡಿದರೆ ಸಂಪುಟದಿಂದ ಕೈಬಿಡುವ ಸಚಿವರಿಗೆ ಇದು ಕೊನೆಯ ಸಂಪುಟ ಸಭೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಸಚಿವ ಸಂಪುಟ ಪುನಾರಚನೆಗೆ ವರಿಷ್ಟರು ಒಪ್ಪಿಗೆ ನೀಡಿದರೆ ಸಂಪುಟದಿಂದ ಹಾಲಿ ಇರುವ ನಾಲ್ವರಿಂದ ಐವರು ಸಚಿವ ಸ್ಥಾನವನ್ನು ಹಿಂಪಡೆದು ಹೊಸಬರಿಗೆ ಅವಕಾಶ ಕಲ್ಪಿಸುವ ಸಾಧ್ಯತೆಗಳಿವೆ. ಅಲ್ಲದೆ, ಉಪ ಚುನಾವಣೆಯಲ್ಲಿ ಆಯ್ಕೆಯಾದ ಮುನಿರತ್ನ, ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್ ಸೇರಿದಂತೆ ಕೆಲವರಿಗೆ ಸಂಪುಟದಲ್ಲಿ ಅವಕಾಶ ನೀಡುವ ನಿರೀಕ್ಷೆ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News