ನೂತನ ವಿಜಯನಗರ ಜಿಲ್ಲೆ ರಚನೆಗೆ ಸಂಪುಟ ಅನುಮೋದನೆ

Update: 2020-11-27 09:44 GMT

ಬೆಂಗಳೂರು, ನ. 27: ತೀವ್ರ ವಿರೋಧದ ಮಧ್ಯೆಯೇ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ರಾಜ್ಯದ 31ನೆ ನೂತನ ವಿಜಯನಗರ (ಹೊಸಪೇಟೆ) ಜಿಲ್ಲೆ ರಚನೆ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೇಲ್ಕಂಡ ತೀರ್ಮಾನ ಮಾಡಲಾಗಿದೆ. ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆ, ಹರಪ್ಪನಹಳ್ಳಿ, ಹೂವಿನ ಹಡಗಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು ಹಾಗೂ ಕೂಡ್ಲಿಗಿ ಸೇರಿ ಆರು ತಾಲೂಕುಗಳನ್ನು ಒಳಗೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 10 ತಾಲೂಕುಗಳು ಹಾಗೂ 11 ವಿಧಾನಸಭಾ ಕ್ಷೇತ್ರಗಳಿದ್ದವು. ಬಳ್ಳಾರಿ, ಸಿರುಗುಪ್ಪ, ಕುರುಗೋಡು, ಕಂಪ್ಲಿ ಹಾಗೂ ಸಂಡೂರು ತಾಲೂಕುಗಳಷ್ಟೇ ಉಳಿಯಲಿವೆ. ಇದೀಗ ನೂತನ ಜಿಲ್ಲೆಗೆ ಆರು ತಾಲೂಕು ಗುರುತಿಸಲಾಗಿದ್ದು, ಈ ಸಂಬಂಧ ಆಕ್ಷೇಪಗಳನ್ನು ಆಹ್ವಾನಿಸಿ ಪರಿಶೀಲಿಸಿದ ಬಳಿಕ ಈ ಸಂಬಂಧ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದು ಮಾಧುಸ್ವಾಮಿ ಹೇಳಿದರು.

ವಿಜಯನಗರ ನೂತನ ಜಿಲ್ಲೆಗೆ ಪ್ರತ್ಯೇಕ ಜಿಲ್ಲಾ ನಕ್ಷೆ ಸಿದ್ದಪಡಿಸಲು ಸೂಚಿಸಲಾಗಿದೆ. ಜೊತೆಗೆ ಜಿಲ್ಲಾಧಿಕಾರಿಗಳ ಕಚೇರಿ, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ಕಂದಾಯ ವಿಭಾಗಗಳು ಹಾಗೂ ಉಪ ವಿಭಾಗಗಳನ್ನು ತರೆಯಲು, ನೂತನ ಜಿಲ್ಲೆ ಅಗತ್ಯ ಅನುದಾನ ಹಾಗೂ ಕಾನೂನಾತ್ಮಕ ವಿಚಾರಗಳಿಗೆ ಸಂಪುಟ ಸಭೆ ಸಮ್ಮತಿಸಿದೆ ಎಂದು ಮಾಧುಸ್ವಾಮಿ ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News