ಸಿಎಂ ಯಡಿಯೂರಪ್ಪ ಸುದ್ದಿಗೋಷ್ಟಿ ಹಠಾತ್ ರದ್ದು

Update: 2020-11-27 13:55 GMT

ಬೆಂಗಳೂರು, ನ. 27: ವೀರಶೈವ-ಲಿಂಗಾಯತ ಸಮುದಾಯವನ್ನು ಕೇಂದ್ರ ಸರಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಲ್ಲಿ ಸೇರಿಸಲು ಶಿಫಾರಸ್ಸು ಮಾಡುವ ಕುರಿತು ಸಂಪುಟ ಸಂಪುಟ ಸಭೆಯ ಬಳಿಕ ನಿಗದಿಯಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರ ಸುದ್ದಿಗೋಷ್ಠಿ ರದ್ದಾಯಿತು.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸುದ್ದಿಗೋಷ್ಠಿಗೆ ಎಂದು ಮಾಧ್ಯಮ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿತ್ತು. ಪತ್ರಕರ್ತರು ಸಿಎಂ ಮಾತನಾಡುವ ನಿರೀಕ್ಷೆಯಲ್ಲಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಪತ್ರಿಕಾಗೋಷ್ಠಿಯನ್ನು ರದ್ದು ಮಾಡಲಾಯಿತು.

‘ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ' ಸಂಬಂಧ ಊಹಾಪೋಹಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಮರಾಠಾ ಅಭಿವೃದ್ಧಿ ನಿಗಮ ರಚನೆ, ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ರಚನೆ, ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸೇರಿ ಏಕಾಏಕಿ ಕೆಲ ನಿರ್ಧಾರಗಳನ್ನು ಕೈಗೊಂಡಿರುವುದು ಬಿಜೆಪಿ ನಾಯಕರ ಆಕ್ಷೇಪಕ್ಕೆ ಕಾರಣವಾಗಿತ್ತು.

ಈ ಮಧ್ಯೆ ಸಚಿವ ಸಂಪುಟ ಸಭೆಯಲ್ಲಿಯೂ ಸಿಎಂ ನಿರ್ಧಾರಕ್ಕೆ ಕೆಲ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆಂದು ಹೇಳಲಾಗಿದೆ. ಹೀಗಾಗಿ ಲಿಂಗಾಯತ ಸಮುದಾಯವನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡುವ ವಿಚಾರವನ್ನು ಸದ್ಯಕ್ಕೆ ಮುಂದೂಡಲಾಗಿದೆ. ಅಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಮೂಲಕ ಸೂಚನೆಯೊಂದನ್ನು ರವಾನಿಸಿದ ಹಿನ್ನೆಲೆಯಲ್ಲಿ ಬಿಎಸ್‍ವೈ ತಣ್ಣಗಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವೀರಶೈವ-ಲಿಂಗಾಯತ ಸಮುದಾಯವನ್ನು ಕೇಂದ್ರ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಉದ್ದೇಶಿಸಲಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಸಂಗ್ರಹಿಸುವ ಅಗತ್ಯವಿರುವ ಹಿನ್ನೆಲೆಯಲ್ಲಿ ಹೊಸದಿಲ್ಲಿಗೆ ತೆರಳಿ ಪಕ್ಷದ ವರಿಷ್ಟರೊಂದಿಗೆ ಸಮಾಲೋಚನೆ ನಡೆಸಿ ಆ ಬಳಿಕ ತೀರ್ಮಾನ ಮಾಡುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಮುಂದೂಡಲಾಗಿದೆ.

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News