ಖಾಸಗಿ ಶಾಲೆಗಳ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ: ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್

Update: 2020-11-27 16:02 GMT

ಬೆಂಗಳೂರು, ನ.27: ಖಾಸಗಿ ಶಿಕ್ಷಣ ಶಾಲಾ ಸಂಸ್ಥೆಗಳ ಸಮಸ್ಯೆಗಳ ಕುರಿತು ಶಿಕ್ಷಣ ಸಚಿವ ಸುರೇಶ್‍ ಕುಮಾರ್ ಗಮನಕ್ಕೆ ತಂದು, ಶೀಘ್ರವೇ ಬಗೆಹರಿಸುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಆನ್‍ಲೈನ್ ಕ್ಲಾಸ್ ನಿಲ್ಲಿಸಿರುವುದು ಸೇರಿದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳ ಕುರಿತು ಆಯುಕ್ತರ ಕಚೇರಿಯಲ್ಲಿ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳನ್ನು ಮುಂದುವರಿಸುವುದರ ಕುರಿತು ಶಿಕ್ಷಣ ಸಂಸ್ಥೆಗಳು ಸಮ್ಮತಿ ಸೂಚಿಸಿವೆ ಎಂದು ತಿಳಿಸಿದ್ದಾರೆ.

ಆರ್‍ಟಿಇ ಬಾಕಿ ಹಣ ಪಾವತಿ, ಪೋಷಕರಿಂದ ಶುಲ್ಕ ಪಾವತಿ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಖಾಸಗಿ ಶಿಕ್ಷಣ ಸಂಸ್ಥೆಗಳು ಸರಕಾರಕ್ಕೆ ವರದಿ ಸಲ್ಲಿಸಿವೆ. ಈ ವರದಿಯನ್ನು ಶಿಕ್ಷಣ ಸಚಿವ ಸುರೇಶ್‍ ಕುಮಾರ್ ಗೆ ಇಂದು(27) ಸಂಜೆಯೇ ಸಲ್ಲಿಸಲಾಗುವುದು. ಆದ್ಯತೆಯ ಮೇರೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಬಗೆಹರಿಸಲಾಗುವುದೆಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಖಾಸಗಿ ಶಾಲಾ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಮಾತನಾಡಿ, ನಮಗೆ ವಿದ್ಯಾರ್ಥಿಗಳ ಹಿತಾಸಕ್ತಿಯೇ ಮುಖ್ಯ. ಹೀಗಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುವಂತಹ ಯಾವುದೇ ನಿರ್ಧಾರ ಕೈಗೊಳಲ್ಲ. ಆದರೆ, ಸರಕಾರದ ಗೊಂದಲಕಾರಿ ನೀತಿಯಿಂದಾಗಿ ಪೋಷಕರಿಗೂ ಶಾಲಾ ಆಡಳಿತ ಮಂಡಳಿಗೂ ಗೊಂದಲಕಾರಿಯಾಗಿದೆ ಎಂದು ತಿಳಿಸಿದರು.

ಕೆಲವು ಪೋಷಕರು 2019ರ ಮಾರ್ಚ್ ನಲ್ಲೂ ತಮ್ಮ ಮಕ್ಕಳ ಶಾಲಾ ಶುಲ್ಕ ಕಟ್ಟಲಿಲ್ಲ. 2020ರ ಸಾಲಿನಲ್ಲೂ ಕಟ್ಟಲಿಲ್ಲ. ಅದನ್ನು ಕಂತುಗಳ ರೂಪದಲ್ಲಾದರು ಕಟ್ಟಲು ಶಾಲಾ ಆಡಳಿತ ಮಂಡಳಿ ಮನವಿ ಮಾಡಿದೆ. ಆದರೆ, ಸರಕಾರ ಶಾಲಾ ಶುಲ್ಕ ಕಟ್ಟುವ ಅಗತ್ಯವಿಲ್ಲವೆಂಬ ರೀತಿಯಲ್ಲಿ ಹೇಳಿಕೆ ನೀಡುತ್ತಿದೆ. ಇದು ಶಿಕ್ಷಣ ಸಂಸ್ಥೆಗಳಿಗೆ ಸಮಸ್ಯೆಯಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಸರಕಾರ ಖಾಸಗಿ ಶಾಲೆಗಳಿಗೆ ಆರ್‍ಟಿಇ ಬಾಕಿ ಹಣವನ್ನು ಪಾವತಿಸುತ್ತಿಲ್ಲ. ಇದರಿಂದ ಶಿಕ್ಷಕರಿಗೆ, ಶಿಕ್ಷಕೇತರರಿಗೆ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ. ಹಾಗೂ ಕೆಲವು ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ದಾಖಲಿಸುತ್ತಿಲ್ಲ. ಹೀಗೆ ಖಾಸಗಿ ಶಾಲೆಗಳ ಸಮಸ್ಯೆ ಗಂಭೀರವಾಗಿದೆ. ಕೂಡಲೇ ರಾಜ್ಯ ಸರಕಾರ ನಮ್ಮ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸರಕಾರಕ್ಕೆ 15 ದಿನಗಳ ಗಡುವು

ಶಾಸಗಿ ಶಾಲೆಗಳ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ 15 ದಿನಗಳ ಗಡುವು ನೀಡುತ್ತಿದ್ದೇವೆ. ಆದರೂ ಸರಕಾರ ನಿರ್ಲಕ್ಷ್ಯ ವಹಿಸಿದರೆ ಆನ್‍ಲೈನ್ ತರಗತಿಗಳನ್ನು ಸಂಪೂರ್ಣವಾಗಿ ಬಂದ್ ಮಾಡದೆ ಬೇರೆ ದಾರಿಯಿಲ್ಲವಾಗಿದೆ.

-ಶಶಿಕುಮಾರ್, ಪ್ರಧಾನ ಕಾರ್ಯದರ್ಶಿ, ಖಾಸಗಿ ಶಾಲೆಗಳ ಒಕ್ಕೂಟ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News