ಸಂವಿಧಾನ ಬದಲಾವಣೆಗೆ ಮುಂದಾದರೆ ಸಹಿಸುವುದಿಲ್ಲ: ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಬಿ.ಚನ್ನಕೃಷ್ಣಪ್ಪ

Update: 2020-11-27 17:11 GMT

ಬೆಳಗಾವಿ, ನ. 27: ಡಾ.ಬಿ.ಆರ್.ಅಂಬೇಡ್ಕರ್ ಅವರ ರೂಪಿಸಿರುವ ಸಂವಿಧಾನವನ್ನು ದುರ್ಬಲಗೊಳಿಸುವ ಅಥವಾ ಪರಾಮರ್ಶೆ ನೆಪದಲ್ಲಿ ಬದಲಾವಣೆಗೆ ಪ್ರಯತ್ನ ಮಾಡಿದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಕರ್ನಾಟಕ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಬಿ.ಚನ್ನಕೃಷ್ಣಪ್ಪ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ನಗರದ ಕೋರ್ಟ್ ಆವರಣದಲ್ಲಿರುವ ಕರ್ನಾಟಕ ಸರಕಾರಿ ನೌಕರರ ಭವನದಲ್ಲಿ ಏರ್ಪಡಿಸಿದ್ದ ‘ಸಂವಿಧಾನ ಹಬ್ಬ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕೆಲ ಸ್ಥಾಪಿತ ಹಿತಾಸಕ್ತಿಗಳು ಅಂಬೇಡ್ಕರ್ ಅವರು ಸಂವಿಧಾನವನ್ನೇ ರಚಿಸಿಲ್ಲ ಎಂದು ಅಪಪ್ರಚಾರ ನಡೆಸುತ್ತಿವೆ. ಅಲ್ಲದೆ, ಕೇಂದ್ರದಲ್ಲಿ ಅಧಿಕಾರಕ್ಕೇರಿರುವ ಬಿಜೆಪಿ ನೇತೃತ್ವದ ಸರಕಾರದ ಕೆಲವರು ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತೇಜೋವಧೆ ಮತ್ತು ಸಂವಿಧಾನ ದುರ್ಬಲಗೊಳಿಸಲು ವಿಫಲಯತ್ನಗಳು ನಡೆಯುತ್ತಿವೆ ಎಂದು ದೂರಿದರು.

ನಮ್ಮ ದೇಶದಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕಗಳು ಕಳೆದರೂ ಇಂದಿಗೂ ಸಂವಿಧಾನ ಸಮರ್ಪಕವಾಗಿ ಜಾರಿಯಾಗಿಲ್ಲ. ಸಂವಿಧಾನವನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಅಸ್ಪøಶ್ಯತೆ, ಜಾತಿಯ ಅಸಮಾನತೆ, ಮೌಢ್ಯ, ಬಡತನ ನಿರ್ಮೂಲನೆ ಮಾಡುವ ಮೂಲಕ ಪ್ರಬುದ್ಧ ಭಾರತ ನಿರ್ಮಾಣ ಮಾಡಬೇಕು. ಸಂವಿಧಾನವನ್ನು ರಕ್ಷಣೆ ಮಾಡಬೇಕು ಎಂದು ಚನ್ನಕೃಷ್ಣಪ್ಪ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯಾಧ್ಯಕ್ಷ ಕಾಕಾ ಸಾಹೇಬ ಕಂಬಾಲ್ಕರ್, ಮಹಿಳಾ ಘಟಕದ ಅಧ್ಯಕ್ಷೆ ಕಮಲಮ್ಮ, ಪದಾಧಿಕಾರಿಗಳಾದ ಗಣೇಶ್ ಪಿ.ಸಂಗಣ್ಣ, ಸಂಜಯ ಕುಮಾರ್ ಕುರಬೇಟ, ಶಂಕರ ದಪಡ್ಡಮನಿ, ಕವಿತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ವಿವಿಧ ಪಕ್ಷಗಳ ಕಾರ್ಯಕರ್ತರು ಸಂಘಟನೆಗೆ ಸೇರ್ಪಡೆಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News