'ಸಂಪುಟ ವಿಸ್ತರಣೆ' ಹೊಣೆ ಬಿಜೆಪಿ ನೂತನ ಉಸ್ತುವಾರಿ ಅರುಣ್ ಸಿಂಗ್ ಹೆಗಲಿಗೆ

Update: 2020-11-30 15:51 GMT

ಬೆಂಗಳೂರು, ನ. 30: 'ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಿಕ್ಕಟ್ಟು, ನಾಯಕತ್ವ ಬದಲಾವಣೆ' ಸೇರಿದಂತೆ ಇನ್ನಿತರ ವಿಚಾರಗಳ ಸಂಬಂಧ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿ ಇತ್ಯರ್ಥಪಡಿಸಲು ಬಿಜೆಪಿ ವರಿಷ್ಟರು, ಪಕ್ಷದ ಕರ್ನಾಟಕ ರಾಜ್ಯ ನೂತನ ಉಸ್ತುವಾರಿ ಅರುಣ್ ಸಿಂಗ್ ಅವರ ಹೆಗಲಿಗೆ ವಹಿಸಿದ್ದಾರೆ.

ಡಿ.4ಕ್ಕೆ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಈ ಸಂಬಂಧ ಸಮಾಲೋಚನೆ ನಡೆಸಲಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ, ಬೀದರ್ ಜಿಲ್ಲೆಯ ಬಸವಕಲ್ಯಾಣ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಸಂಪುಟಕ್ಕೆ ಯಾರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂಬುದರ ಕುರಿತು ಡಿ.4ರಂದು ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಈ ಕುರಿತು ತೀರ್ಮಾನಿಸುವ ಸಾಧ್ಯತೆಗಳಿವೆ.

ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ‘ಇನ್ನು ಒಂದೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಟರು ಅನುಮೋದನೆ ನೀಡಲಿದ್ದಾರೆ' ಎಂದು ಹೇಳಿಕೆ ನೀಡುತ್ತಿದ್ದಾರೆ. ಅರುಣ್ ಸಿಂಗ್ ಅವರು ರಾಜ್ಯದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ವರಿಷ್ಟರಿಗೆ ವರದಿ ಸಲ್ಲಿಸಿದ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಅಧಿಕೃತ ತೀರ್ಮಾನವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ವೀರಶೈವ-ಲಿಂಗಾಯತ ಸಮುದಾಯವನ್ನು ಕೇಂದ್ರ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಸಂಬಂಧ ಏಕಾಏಕಿ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲು ಮುಂದಾಗಿದ್ದ ಯಡಿಯೂರಪ್ಪ ಅವರ ನಡೆಗೆ ಹೈಕಮಾಂಡ್ ಆಕ್ಷೇಪ ವ್ಯಕ್ತಪಡಿಸಿತ್ತು. ಅಲ್ಲದೆ, ನಿಗಮ ಮಂಡಳಿಗಳಿಗೆ ತಮ್ಮ 'ಬೆಂಬಲಿಗರ' ನೇಮಕಾತಿಗೂ ಕೆಲ ಮುಖಂಡರಿಂದ ವಿರೋಧ ವ್ಯಕ್ತವಾಗಿತ್ತು.

ಇದೀಗ ರಾಜ್ಯದಲ್ಲಿ ಪ್ರಸಕ್ತ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿಣಿ ಸದಸ್ಯರೊಂದಿಗೆ ಚರ್ಚಿಸಿ ವರಿಷ್ಟರಿಗೆ ವರದಿ ನೀಡಿದ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಟರು ಸೂಚನೆ ನೀಡುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News