ಕೆಲ ಬದಲಾವಣೆಗಳೊಂದಿಗೆ ವಿವಿಧ ನಿಗಮ-ಆಯೋಗಗಳಿಗೆ ನೂತನ ಅಧ್ಯಕ್ಷರ ನೇಮಕ

Update: 2020-11-30 17:41 GMT

ಬೆಂಗಳೂರು, ನ.30: ರಾಜ್ಯ ಸರಕಾರವು ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಡಿ ಬರುವ ನಿಗಮ, ಸಮಿತಿ, ಆಯೋಗಗಳಿಗೆ ನ.24ರಂದು ನೇಮಕ ಮಾಡಿ ಹೊರಡಿಸಿದ್ದ ಆದೇಶದಲ್ಲಿ ಕೆಲವು ಬದಲಾವಣೆಗಳೊಂದಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿದ್ದ ರಾಯಭಾಗ ಕ್ಷೇತ್ರದ ಶಾಸಕ ದುರ್ಯೋದನ ಐಹೊಳೆಯವರನ್ನು ರಾಜ್ಯ ಆದಿಜಾಂಭವ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಡಾ.ಬಾಬು ಜಗಜೀವನ್‍ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಪ್ರೊ.ಎನ್.ಲಿಂಗಣ್ಣ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಆದಿಜಾಂಭವ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕಗೊಂಡಿದ್ದ ಸಿ.ಮುನಿಕೃಷ್ಣ ಅವರನ್ನು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಡಾ.ಬಾಬು ಜಗಜೀವನ್‍ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕಗೊಂಡಿದ್ದ ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ನೆಹರು ಓಲೇಕಾರ್ ಅವರನ್ನು ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಮಾಜಿ ಸಚಿವ ಎಂ.ಶಿವಣ್ಣ(ಕೋಟೆ) ಅವರನ್ನು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮ ನಿರ್ದೇಶನ ಮಾಡಿ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News