ವಿರೋಧದ ನಡುವೆಯೇ ಯೋಗೇಶ್ವರ್ ಗೆ ಸಚಿವ ಸ್ಥಾನ ಖಚಿತ ಎಂದ ಬಿಎಸ್‌ವೈ: ಶಾಸಕರಲ್ಲಿ ಅಸಮಾಧಾನ

Update: 2020-12-01 12:50 GMT

ಬೆಂಗಳೂರು, ಡಿ.1: ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವುದು ಖಚಿತ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಸಂಪುಟ ವಿಸ್ತರಣೆಯ ಸುಳಿವು ನೀಡಿದ್ದಾರೆ.

ಮಂಗಳವಾರ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಪ್ರತಿಮೆಗೆ ಅವರ ಪುಣ್ಯ ತಿಥಿ ಅಂಗವಾಗಿ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸಿ.ಪಿ.ಯೋಗೇಶ್ವರ್ ಸಚಿವರಾಗುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಮುಖ್ಯಮಂತ್ರಿ ಹೇಳಿದರು.

ಸಿ.ಪಿ.ಯೋಗೇಶ್ವರ್ ಅವರನ್ನು ಯಾವುದೆ ಕಾರಣಕ್ಕೂ ಮಂತ್ರಿ ಮಾಡಬಾರದು ಎಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಶಾಸಕ ರಾಜೂಗೌಡ ಸೇರಿದಂತೆ ಇನ್ನಿತರ ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಮೂಲ ಬಿಜೆಪಿ ಶಾಸಕರು ವಿರೋಧ ವ್ಯಕ್ತಪಡಿಸಿರುವುದರ ನಡುವೆಯೂ ಮುಖ್ಯಮಂತ್ರಿಯ ಈ ಹೇಳಿಕೆ ಶಾಸಕರಲ್ಲಿ ಅಸಮಾಧಾನ ಮನೆ ಮಾಡುವಂತೆ ಮಾಡಿದೆ.

ಕೆಂಗಲ್ ಆದರ್ಶ ಮಾದರಿ: ರಾಜಕೀಯ ಮುತ್ಸದ್ದಿ, ಧೀಮಂತ ರಾಜಕಾರಣಿ ಕೆಂಗಲ್ ಹನುಮಂತಯ್ಯ ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರದ ರೈಲ್ವೆ ಸಚಿವರಾಗಿ ಪ್ರಥಮ ಪ್ರಥಮ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಅದ್ಭುತ ಸೇವೆ ಸಲ್ಲಿಸಿದ್ದಾರೆ. ದೂರದೃಷ್ಟಿಯ ನಾಯಕರಾಗಿ, ದಕ್ಷ ಆಡಳಿತ ನೀಡುವ ಮೂಲಕ ರಾಜ್ಯದ ಏಳಿಗೆಗಾಗಿ, ಗ್ರಾಮೀಣ ಜನತೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದವರು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಬಣ್ಣಿಸಿದರು.

ಗ್ರಾಮೀಣ ಭಾಷೆ, ಸಂಸ್ಕೃತಿ , ಸಾಹಿತ್ಯ ಬೆಳವಣಿಗೆಗೆ ಕೆಂಗಲ್ ಹನುಮಂತಯ್ಯನವರ ಕೊಡುಗೆ ವಿಶೇಷವಾದದ್ದು. ಕರ್ನಾಟಕ ಏಕೀಕರಣಕ್ಕಾಗಿಯೂ ಅವರು ಶ್ರಮಿಸಿದವರು. ಕೆಂಗಲ್ ಹನುಮಂತಯ್ಯ ಕಟ್ಟಿಸಿದ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧ ದೇಶದಲ್ಲೆ ಅತ್ಯಂತ ಭವ್ಯ ಕಟ್ಟಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅವರ ಆದರ್ಶ, ಮೌಲ್ಯಗಳನ್ನು ಅನುಸರಿಸಿಕೊಂಡು ಮುಂದುವರಿಯುವುದೆ ನಾವು ಅವರಿಗೆ ಕೊಡುವ ಗೌರವವಾಗಿದೆ ಎಂದು ಯಡಿಯೂರಪ್ಪ ಹೇಳಿರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ರಮೇಶ್ ಜಾರಕೀಹೊಳಿ ಮನವಿಗೆ ಹೈಕಮಾಂಡ್ ಅಸ್ತು?

ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಲು ನಡೆದ ಆಪರೇಷನ್ ಕಮಲದ ಸಂದರ್ಭದಲ್ಲಿ ಶಾಸಕರನ್ನು ಕಾಪಾಡಿಕೊಂಡಿದ್ದ ಸಿ.ಪಿ.ಯೋಗೇಶ್ವರ್ ಅವರನ್ನು ಸಚಿವರನ್ನಾಗಿ ಮಾಡುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕೀಹೊಳಿ, ಕಳೆದ ವಾರ ಹೊಸದಿಲ್ಲಿಯಲ್ಲಿ ಬಿಜೆಪಿ ಹೈಕಮಾಂಡ್ ಬಳಿ ಲಾಬಿ ನಡೆಸಿದ್ದರು ಎಂದು ತಿಳಿದು ಬಂದಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಜೊತೆಯೂ ಯೋಗೇಶ್ವರ್ ಪರ ರಮೇಶ್ ಜಾರಕೀಹೊಳಿ ಚರ್ಚೆ ನಡೆಸಿದ್ದರು. ಅಲ್ಲದೆ, ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಮೂಲಕವು ಹೈಕಮಾಂಡ್ ಮೇಲೆ ಪ್ರಭಾವ ಬೀರಿದ್ದರು ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News