''ಜನರ ಸಮಸ್ಯೆ ಕೇಳಲು ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ''

Update: 2020-12-02 18:32 GMT

ಮೈಸೂರು,ಡಿ.2: ಯಾವ ಕ್ಷೇತ್ರವನ್ನು ಜನರು ಶಾಸಕ ಹಾಗೂ ಸಂಸದರಿಗೆ ಬರೆದುಕೊಟ್ಟಿರುವುದಿಲ್ಲ. ಹಾಗಾಗಿ, ಜನರ ಸಮಸ್ಯೆಗಳನ್ನು ಕೇಳಲು ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪರ ಹೇಳಿಕೆ ನೀಡಿದರು.

ಜಿಲ್ಲಾಧಿಕಾರಿ ಹಾಗೂ ಶಾಸಕರ ನಡುವಿನ ಜಟಾಪಟಿ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಜನರ ಸಮಸ್ಯೆ ಆಲಿಸಲು ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. ಶಾಸಕರು, ಸಂಸದರು ಎಂಬುದು ಜನರ ಸೇವೆ ಮಾಡಲು ಹಾಗೂ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಇರುವ ಹುದ್ದೆ ಅಷ್ಟೇ. ಜಿಲ್ಲಾಧಿಕಾರಿಗಳು ಜನರ ಬಳಿಗೆ ಹೋಗಿ ಅವರ ಸಮಸ್ಯೆ ಕೇಳುತ್ತಿದ್ದಾರೆ. ಇದನ್ನು ಎಲ್ಲರೂ ಬೆಂಬಲಿಸಬೇಕು ಎಂದರು.

ಗ್ರಾಪಂ ಚುನಾವಣೆ ಮುಗಿದ ಮೇಲೆ ನಾನೂ ಜನರ ಬಳಿ ಹೋಗುತ್ತೇನೆ. ಯಾರು ತಡೆಯುತ್ತಾರೆ ನೋಡೋಣ. 4 ಮಂದಿ ಶಾಸಕರೂ ಒಟ್ಟಾಗಿ ಜಿಲ್ಲಾಧಿಕಾರಿ ವಿರುದ್ಧ ಸುದ್ದಿಗೋಷ್ಠಿ ನಡೆಸಿ ಹೆದರಿಸುತ್ತಿದ್ದೀರಾ? ನೀವೂ ಹೆದರಿಸಿದರೆ ನಾವು ಹೆದರಬೇಕಾ? ನೀವೇ ಜನರ ಸಮಸ್ಯೆ ಬಗೆಹರಿಸಿದ್ದರೆ ಜನರೇಕೆ ಡಿಸಿ ಬಳಿ ಕಷ್ಟ ಹೇಳಿಕೊಳ್ಳುತ್ತಿದ್ದರು ಎಂದು ಪ್ರಶ್ನಿಸಿದರು.

ಜನಪ್ರತಿನಿಧಿಗಳು ಮಾಡಬೇಕಾದ ಕೆಲಸವನ್ನು ಜಿಲ್ಲಾಧಿಕಾರಿ ಮಾಡುತ್ತಿದ್ದಾರೆ. ಅದಕ್ಕೆ ಅನುವು ಮಾಡಿಕೊಡಿ. ಮೊದಲು ಹಕ್ಕುಚ್ಯುತಿ ಕುರಿತು ಪುಸ್ತಕ ಓದಿಕೊಳ್ಳಿ. ಮೂರ್ನಾಲ್ಕು ಬಾರಿ ಶಾಸಕರು ಆದವರು ನೀವು. ಯಾವುದು ಹಕ್ಕುಚ್ಯುತಿ ಎಂಬುದು ನಿಮಗೆ ಗೊತ್ತಿಲ್ಲವೇ ಎಂದು ಟೀಕಿಸಿದರು.

ಜನರ ಸಮಸ್ಯೆ ಕೇಳುವ ಸಭೆಯಲ್ಲಿ ನಿಮ್ಮನ್ನು ಗದ್ದುಗೆ ಮೇಲೆ ಕೂರಿಸದಿದ್ದರೆ ಅದು ಹಕ್ಕುಚ್ಯುತಿಯಾ? ಡಿಸಿಗಳು ಜನರ ಬಳಿ ಹೋಗಿ ಕೆಲಸ ಮಾಡಬೇಕು. ಆ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಅವರಿಗೆ ಜನರ ಕೆಲಸ ಮಾಡಲು ಬಿಡಿ ಎಂದು ಸಲಹೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News