ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Update: 2020-12-03 10:03 GMT

ಶಿವಮೊಗ್ಗ, ಡಿ.3: ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ಬಜರಂಗದಳದ ಕಾರ್ಯಕರ್ತನ ಮೇಲೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಇಂದು ಬೆಳಗ್ಗೆ ನಡೆದಿದೆ.
ನಾಗೇಶ್(25) ಹಲ್ಲೆಗೆ ಒಳಗಾದವರು. ಇಂದು ಮುಂಜಾನೆ ನೆಹರು ಕ್ರೀಡಾಂಗಣಕ್ಕೆ ವಾಯುವಿಹಾರಕ್ಕೆ ತೆರಳಿ ಮನೆಗೆ ವಾಪಸ್ಸಾಗುತ್ತಿದ್ದ  ವೇಳೆ ಹಿಂಬದಿಯಿಂದ ಬಂದ ದುಷ್ಕರ್ಮಿಗಳು ದೊಣ್ಣೆಯಿಂದ ನಾಗೇಶ್ ತಲೆ ಹಾಗೂ ಮುಖಕ್ಕೆ ಹೊಡೆದಿದ್ದಾರೆ. ಪರಿಣಾಮ ಮೂಗಿಗೆ ಗಂಭೀರ ಗಾಯವಾಗಿದ್ದು, ಗಾಯಾಳುವನ್ನು ನಗರದ ಮೆಟ್ರೊ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಗಾಂಧಿ ಬಜಾರ್‌ನಲ್ಲಿ ಬಿಗುವಿನ ವಾತಾವರಣ:
ನಾಗೇಶ್ ಮೇಲೆ ಹಲ್ಲೆ ನಡೆದ ಘಟನೆ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಬಜರಂಗದಳದ ಕಾರ್ಯಕರ್ತರು ಗಾಂಧಿಬಜಾರ್‌ನಲ್ಲಿ ಜಮಾಯಿಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಗಾಂಧಿಬಜಾರ್‌ನಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರು ಮೊಕ್ಕಾಂ ಹೂಡಿದ್ದಾರೆ. 
ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬಿ.ವೈ ಆರ್:
ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಬಜರಂಗದಳ ಕಾರ್ಯಕರ್ತ  ನಾಗೇಶ್ ಆಸ್ಪತ್ರೆಗೆ ದಾಖಲಾಗಿದ್ದು, ಸಂಸದ ಬಿ.ವೈ.ರಾಘವೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
 ನಾಗೇಶ್ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ.ಇದೊಂದು ಪೂರ್ವನಿಯೋಜಿತ ಕೃತ್ಯ ಎನ್ನವುದು ಕಂಡುಬರುತ್ತಿದೆ.  ಹಲ್ಲೆ ಮಾಡಿದ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕು. ಇಂತಹ ಘಟನೆ ಮರುಕಳಿಸಬಾರದು ಎಂದು ಆಗ್ರಹಿಸಿದರು.
ಆರೋಪಿಗಳ ಬಂಧನಕ್ಕೆ ಕ್ರಮ:
ಘಟನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ ಶಾಂತರಾಜು,ಹಲ್ಲೆ ನಡೆಸಿದ ಆರೋಪಿಗಳ ಪತ್ತೆಗಾಗಿ ರೌಡಿ ನಿಗ್ರಹ ದಳದ ಇನ್ಸ್‌ಫೆಕ್ಟರ್ ಕೆ.ಟಿ ಗುರುರಾಜ್ ಮತ್ತು ಕೋಟೆ ಸರ್ಕಲ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ ಎಂದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News