ನಟಿ ರಾಗಿಣಿ ಡ್ರಗ್ಸ್ ಪ್ರಕರಣ: ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದ ಸುಪ್ರೀಂಕೋರ್ಟ್

Update: 2020-12-04 13:54 GMT

ಬೆಂಗಳೂರು, ಡಿ.4: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಸುಪ್ರೀಂಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ವಿಚಾರಣೆಯನ್ನು ಜನವರಿ ಮೊದಲ ವಾರಕ್ಕೆ ಮುಂದೂಡಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್, ನವೀನ್ ಸಿನ್ಹಾ ಮತ್ತು ಕೆ.ಎಂ.ಜೋಸೆಫ್ ನೇತೃತ್ವದ ಪೀಠ, ಪ್ರಕರಣ ಸಂಬಂಧ ರಾಜ್ಯ ಸರಕಾರದ ಪ್ರತಿಕ್ರಿಯೆ ಕೇಳಿದೆ. ಜತೆಗೆ ಸಿಸಿಬಿ ಪೊಲೀಸರಿಗೆ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆ.4ರಂದು ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಎನ್‍ಡಿಪಿಎಸ್ ಮತ್ತು ಐಪಿಸಿ ಕಾಯ್ದೆಗಳಡಿಯಲ್ಲಿ ರಾಗಿಣಿ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಸದ್ಯ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ರಾಗಿಣಿ ವಿಚಾರಣಾ ನ್ಯಾಯಾಲಯ, ಹೈಕೋರ್ಟ್ ನಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಕಳೆದ ಮೂರು ತಿಂಗಳಿನಿಂದ ರಾಗಿಣಿ ಜೈಲು ವಾಸ ಅನುಭವಿಸುತ್ತಿದ್ದಾರೆ. ಸದ್ಯ ಸುಪ್ರೀಂಕೋರ್ಟ್ ನಲ್ಲೂ ಅವರಿಗೆ ನಿರಾಸೆ ಆಗಿದೆ.

ಡ್ರಗ್ಸ್ ಜಾಲದ ಜೊತೆಗೆ ನಂಟು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಸೆ.4ರಂದು ಅವರ ಮನೆ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ನಂತರ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News