ಬಹುಮತದ ಜೊತೆಗೆ ಗರಿಷ್ಠ ಸ್ಥಾನ ಗೆಲ್ಲುವ ಗುರಿ: ಸುರೇಶ್ ನಾಯಕ್

Update: 2020-12-04 14:02 GMT

ಉಡುಪಿ, ಡಿ.4: ಬಿಜೆಪಿ ಎಲ್ಲ ಸ್ತರಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಸಂದರ್ಭದಲ್ಲಿ ಘೋಷಣೆಯಾಗಿರುವ ಗ್ರಾಪಂ ಚುನಾವಣೆಯಲ್ಲಿ, ಬಿಜೆಪಿ ಜಿಲ್ಲೆಯಲ್ಲಿ 130ಕ್ಕೂ ಹೆಚ್ಚು ಗ್ರಾಪಂಗಳನ್ನು ಗೆಲ್ಲುವ ನಿರೀಕ್ಷೆ ಹೊಂದಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಡಿ.22 ಮತ್ತು 27ರಂದು ಜಿಲ್ಲೆಯಲ್ಲಿ ನಡೆಯಲಿರುವ ಗ್ರಾಪಂ ಚುನಾವಣೆಯ ಪೂರ್ವ ಸಿದ್ಧತೆಗಾಗಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು

ಚುನಾವಣೆಯಲ್ಲಿ ಬಹುಮತ ಸಾಧಿಸುವ ಜೊತೆಗೆ ಎಲ್ಲಾ ಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗರಿಷ್ಠ ಸ್ಥಾನಗಳನ್ನು ಗೆಲ್ಲುವುದು ಬಿಜೆಪಿ ಗುರಿಯಾಗಿದೆ ಎಂದು ಅವರು ಹೇಳಿದರು.

ಬಿಜೆಪಿ ಗ್ರಾಪಂ ಚುನಾವಣೆಯನ್ನು ಎದುರಿಸಲು ಸರ್ವ ಸನ್ನದ್ದವಾಗಿದೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವ ದಲ್ಲಿ ಪಕ್ಷದ ರಾಜ್ಯ ನಾಯಕರ ಸಮಾಗಮದೊಂದಿಗೆ ಜಿಲ್ಲೆಯ 2 ಕಡೆಗಳಲ್ಲಿ ನಡೆದ ಮಂಡಲವಾರು ಗ್ರಾಮ ಸ್ವರಾಜ್ಯ ಸಮಾವೇಶಗಳು ಅತ್ಯಂತ ಯಶಸ್ವಿಯಾಗಿದ್ದು ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಹಾಗೂ ಹೊಸ ಹುಮ್ಮಸ್ಸು ಮೂಡಿಸಿದೆ ಎಂದವರು ಹೇಳಿದರು.

ರಾಜ್ಯ ಬಿಜೆಪಿಯ ಸೂಚನೆಯಂತೆ ಪ್ರತೀ ಬೂತ್ ಮಟ್ಟದಲ್ಲಿ ಪಂಚರತ್ನ, ಪೇಜ್ ಪ್ರಮುಖ್ ನೇಮಕ, ಗ್ರಾಪಂಗಳ ಮಟ್ಟದಲ್ಲಿ ಕುಟುಂಬ ಮಿಲನ ಕಾರ್ಯಕ್ರಮಗಳ ಆಯೋಜನೆ ಪಕ್ಷ ಸಂಘಟನೆಗೆ ಶಕ್ತಿ ತುಂಬಿ ಚುನಾವಣಾ ಪ್ರಚಾರ ಕಾರ್ಯಕ್ಕೆ ಚೈತನ್ಯ ತುಂಬಿದೆ ಎಂದರು.

ಬಿಜೆಪಿ ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳ ಜವಾಬ್ದಾರಿ ನಿರ್ವಹಣೆಯ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಸಾಗತಿಸಿ, ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News