ಜ.15ರೊಳಗೆ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಸೂಚನೆ

Update: 2020-12-04 15:52 GMT

ಬೆಂಗಳೂರು, ಡಿ.4: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಲೆಗೆ ಸೇರದ, ಸೇರಿ ಗೈರು ಹಾಜರಾಗುತ್ತಿರುವ ಮಕ್ಕಳ ಸಮೀಕ್ಷೆಯನ್ನು ಡಿ.15ರಿಂದ ಪ್ರಾರಂಭಿಸಿ ಜ.15ರವರೆಗೆ ಪೂರ್ಣಗೊಳಿಸಬೇಕೆಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ಸೂಚಿಸಿದ್ದಾರೆ.

ಈ ಕುರಿತು ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್‍ಗಳ ಅಧ್ಯಕ್ಷರು, ಅಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅವಶ್ಯವಾಗಿದೆ. ಇದಕ್ಕೆ ಪೂರಕವಾಗಿ ಜ.15ರೊಳಗೆ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸಬೇಕೆಂದರು.

ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲ ಶಾಲೆಗಳಲ್ಲಿ ಶಾಲೆಗೆ ಸೇರದ, ಸೇರಿ ಗೈರು ಹಾಜರಾಗುತ್ತಿರುವ ಮಕ್ಕಳ ಸಮೀಕ್ಷೆಯನ್ನು ಗ್ರಾಮ ಪಂಚಾಯತ್ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮಹಿಳಾ ಸ್ವ-ಸಹಾಯ ಗುಂಪುಗಳ ಜತೆಗೂಡಿ ಮಕ್ಕಳ ಸಮೀಕ್ಷೆ ನಡೆಸಬೇಕಾಗುತ್ತದೆ.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸರ್ವೆಕಾರ್ಯ ನಡೆಸುವ ಸಿಬ್ಬಂದಿಯವರಿಗೆ ಅಗತ್ಯವಾದ ತರಬೇತಿಯನ್ನು ನೀಡಬೇಕು. ಸಮೀಕ್ಷಾ ಕಾರ್ಯದಲ್ಲಿ ಮೊಬೈಲ್ ಆ್ಯಪ್ ಬಳಕೆ ಕುರಿತಂತೆ ಯಾವುದೇ ಮಾಹಿತಿ, ಪ್ರಶ್ನೆಗಳಿದ್ದಲ್ಲಿ ರಾಜ್ಯ ಮಟ್ಟದ ಸಹಾಯವಾಣಿ ದೂ.8448445014ಕ್ಕೆ ಸಂಪರ್ಕಿಸಲು ಸೂಚಿಸಲಾಗಿದೆ.

ಮನೆ ಮನೆ ಸಮೀಕ್ಷೆಯಲ್ಲಿ ಗುರುತಿಸಲಾದ ಶಾಲೆಯಿಂದ ಹೊರಗುಳಿದ ಮಕ್ಕಳ ದಾಖಲಾತಿ ಹಾಜರಾತಿ ಪ್ರಕ್ರಿಯೆಯನ್ನು ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅಗತ್ಯ ಮಾರ್ಗದರ್ಶನ ಮತ್ತು ನೆರವು ನೀಡಬೇಕೆಂದು ಅವರು ಸುತ್ತೋಲೆಯಲ್ಲಿ ಅವರು ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News