ಅರುಣ್ ಸಿಂಗ್ ಜತೆ ಚರ್ಚಿಸಿದ ಬಳಿಕ ಸಂಪುಟ ವಿಸ್ತರಣೆ ತೀರ್ಮಾನ: ಮುಖ್ಯಮಂತ್ರಿ ಯಡಿಯೂರಪ್ಪ

Update: 2020-12-04 15:57 GMT

ಬೆಳಗಾವಿ, ಡಿ. 4: ಪಕ್ಷದ ನೂತನ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಶುಕ್ರವಾರ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಅವರು ದಿಲ್ಲಿಯಿಂದ ಏನು ಸಂದೇಶ ತಂದಿದ್ದಾರೆ ಎನ್ನುವುದನ್ನು ಆಧರಿಸಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದರು.

ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಎರಡು ದಿನ ರಾಜ್ಯದಲ್ಲೆ ಇರಲಿದ್ದು, ಅಗತ್ಯ ಮಾರ್ಗದರ್ಶನ ಮಾಡಲಿದ್ದಾರೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಉಪಚುನಾವಣೆಗಳನ್ನು ನಾವು ಗೆದ್ದಿದ್ದೇವೆ. ಬಸವಕಲ್ಯಾಣ, ಮಸ್ಕಿ ಹಾಗೂ ಬೆಳಗಾವಿ ಲೋಕಸಭಾ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತು ಕಾರ್ಯಕಾರಿಣಿಯಲ್ಲಿ ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು.

ಬಸವಕಲ್ಯಾಣ, ಮಸ್ಕಿ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿಯೂ ಪಕ್ಷದ ಪರವಾಗಿದ್ದು, ಮೂರು ಕ್ಷೇತ್ರಗಳಲ್ಲಿ ಬಿಜೆಪಿಯ ಗೆಲುವು ನಿಶ್ಚಿತ. ಅದೇ ರೀತಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿಯೂ ಪಕ್ಷ ಬೆಂಬಲಿತ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News