ರೈತರು ಹೇಡಿಗಳಾಗದಿರಲು ನಿಮ್ಮ ಇಲಾಖೆ ಏನು ಕ್ರಮ ಕೈಗೊಂಡಿದೆ ?

Update: 2020-12-04 18:24 GMT

ಮಂಡ್ಯ, ಡಿ.4: ಆತ್ಮಹತ್ಯೆಗೆ ಶರಾಣಾಗುವ ರೈತರು ಹೇಡಿಗಳು ಎಂಬ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರೈತರು ಹೇಡಿಗಳಾಗದಂತೆ ನಿಮ್ಮ ಇಲಾಖೆ ಏನು ಕ್ರಮ ಕೈಗೊಂಡಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ಯೋಗ್ಯತೆಗೆ ರೈತರ ಭತ್ತ, ರಾಗಿ ಬೆಳೆಯನ್ನು ಮಳೆಯಿಂದ ರಕ್ಷಿಸಿಕೊಳ್ಳಲು ಈವರೆಗೆ ಇಲಾಖೆ ಒಂದು ಟಾರ್ಪಲ್ ಖರೀದಿಸಿಲ್ಲ. ನಿಮ್ಮ ಹೇಳಿಕೆ ರೈತರ ಬಗ್ಗೆ ಸರಕಾರಕ್ಕೆ ಎಷ್ಟು ಕಾಳಜಿ ಇದೆ ಎಂಬುದನ್ನು ಸೂಚಿಸುತ್ತದೆ ಎಂದು ಟೀಕಿಸಿದರು.

ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಗ್ರಾಮ ಸ್ವರಾಜ್ಯ ಸಮಾವೇಶ ಹೆಸರಿನಲ್ಲಿ ಗ್ರಾಪಂ ಚುನಾವಣೆ ನಡೆಸಲು ಮುಂದಾಗುವ ಮೂಲಕ ಗಾಂಧೀಜಿ ಅವರ ಗ್ರಾಮ ಸ್ವರಾಜ್ ತತ್ವಕ್ಕೆ ಮಸಿ ಬಳಿಯಲು ಯತ್ನಿಸಿದೆ ಎಂದು ಅವರು ಆರೋಪಿಸಿದರು.

ಉತ್ತರ ಕರ್ನಾಟಕದ ರೈತರು ಮಳೆ, ನೆರೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಸಂಪೂರ್ಣ ನಾಶವಾಗಿದೆ. ಈ ಬಗ್ಗೆ ಯೋಚಿಸುವ ಬದಲು ಮುಖ್ಯಮಂತ್ರಿ ಯಡಿಯೂರಪ್ಪ ಬೆಳಗಾವಿಯಲ್ಲಿ ಪಕ್ಷದ ಕೋರ್ ಕಮಿಟಿ, ಕಾರ್ಯಕಾರ್ಯಕಾರಿಣಿ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

ಸಿಎಂ ಅವರು ರಾಜ್ಯದ ನಾಲ್ಕಾರು ಹಳ್ಳಿಗಳಿಗೆ ಭೇಟಿ ನೀಡಿ ಮಳೆ, ನೆರೆಯಿಂದ ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರ ಸಮಸ್ಯೆ ಆಲಿಸಿ ಸ್ಪಂದಿಸುವ ಯತ್ನ ಮಾಡಿದ್ದರೆ ಗ್ರಾಮ ಸ್ವರಾಜ್ ಕಾರ್ಯಕ್ರಮಕ್ಕೆ ನಿಜವಾದ ಅರ್ಥ ಬರುತ್ತದೆ ಅವರು ಸಲಹೆ ನೀಡಿದರು.

ಶಾಸಕರಾದ ಡಿ.ಸಿ.ತಮ್ಮಣ್ಣ, ಕೆ.ಸುರೇಶ್‍ ಗೌಡ, ಸಿ.ಎಸ್.ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ, ಕೆ.ಟಿ.ಶ್ರೀಕಂಠೇಗೌಡ, ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು, ಕೆ.ಎಸ್.ವಿಜಯಾನಂದ, ಜೆಡಿಎಸ್‍ನ ಇತರೆ ಮುಖಂಡರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News