ಉತ್ತಮ ಸಮಾಜ ಕಟ್ಟುವಲ್ಲಿ ವಕೀಲರ ಕೊಡುಗೆ ಅಪಾರ: ಜಿ. ಜಗದೀಶ್

Update: 2020-12-05 14:27 GMT

ಉಡುಪಿ, ಡಿ.5: ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳು ಒಟ್ಟಿಗೆ ಸೇರಿ ಕಾರ್ಯನಿರ್ವಹಿಸಿದರೆ ಅತ್ಯುತ್ತಮ ಅಭಿವೃದ್ಧಿ ಮತ್ತು ಜನರ ಸಮಸ್ಯೆಗಳನ್ನು ಪರಿಹರಿಸಿ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ. ಉತ್ತಮ ಸಮಾಜ ನಿರ್ಮಿಸುವಲ್ಲಿ ವಕೀಲರ ಕೊಡುಗೆ ಅಪಾರ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಉಡುಪಿ ವಕೀಲರ ಸಂಘದ ವತಿಯಿಂದ ಉಡುಪಿ ನ್ಯಾಯಾಲಯದ ಆವರಣದಲ್ಲಿ ಶನಿವಾರ ಆಯೋಜಿಸಲಾದ ವಕೀಲರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಪ್ರತಿಯೊಬ್ಬರು ಕಾನೂನು ಹಾಗೂ ಸಂವಿಧಾನ ಬದ್ಧವಾಗಿ ನಡೆದುಕೊಳ್ಳ ಬೇಕಾಗಿದೆ. ಆಡಳಿತದಲ್ಲಿ ಪ್ರತಿಯೊಂದು ತೀರ್ಮಾನವನ್ನು ಕಾನೂನಿ ನಂತೆ ತೆಗೆದುಕೊಳ್ಳಬೇಕಾಗುತ್ತದೆ. ಆಗ ವಕೀಲರ ಮಾರ್ಗದರ್ಶನ ಹಾಗೂ ಸಲಹೆ ಅತಿ ಅಗತ್ಯವಾಗಿರುತ್ತದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮವನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ವಕೀಲ ಎಂ.ಕೆ.ವಿಜಯ ಕುಮಾರ್ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾಗಿ ನೇಮಕಗೊಂಡ ಉಡುಪಿಯ ನ್ಯಾಯವಾದಿ ಅರುಣ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೊಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಯಾದವ್ ವನ ಮಾಲಾ ಆನಂದರಾವ್ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ.ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ವಂದಿಸಿದರು. ವಕೀಲ ರಾಜಶೇಖರ್ ಶ್ಯಾವ್ರಾವ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News