ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆ ಕಾಯ್ದೆ ಜಾರಿಗೆ ತೀರ್ಮಾನ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್

Update: 2020-12-05 14:35 GMT

ಬೆಳಗಾವಿ, ಡಿ. 5: ರಾಜ್ಯ ಸರಕಾರ ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ತಡೆಗೆ ಕಾಯ್ದೆಯನ್ನು ವಿಧಾನ ಮಂಡಲದಲ್ಲಿ ಮಂಡಿಸಿ ಅಂಗೀಕರಿಸಿ ಅನುಷ್ಟಾನಕ್ಕೆ ತರಬೇಕು ಎಂದು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.

ಶನಿವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರೀತಿ-ಪ್ರೇಮದ ಹೆಸರಿನಲ್ಲಿ ಹೆಣ್ಣು ಮಕ್ಕಳ ಶೋಷಣೆ ತಡೆಗಟ್ಟಲು ಸರಕಾರ ಕ್ರಮ ವಹಿಸಬೇಕು. ಅಲ್ಲದೆ, ಗೋವುಗಳನ್ನು ರಕ್ಷಿಸಬೇಕೆಂಬ ಉದ್ದೇಶದಿಂದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಪ್ರತಿಪಾದಿಸಿದರು.

ಬೀದರ್ ಜಿಲ್ಲೆಯ ಬಸವಕಲ್ಯಾಣ, ರಾಯಚೂರಿನ ಮಸ್ಕಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಗಳ ಉಪಚುನಾವಣೆ ಹಾಗೂ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕ್ರಮ ವಹಿಸಲಾಗುವುದು ಎಂದ ಅವರು, ಗ್ರಾ.ಪಂ.ಚುನಾವಣೆಯಲ್ಲಿ ಪಕ್ಷ ಬೆಂಬಲಿತ ಅಭ್ಯರ್ಥಿಗಳ ಗೆಲ್ಲಿಸಲು ನಿರ್ಧರಿಸಲಾಗಿದೆ ಎಂದರು.

'ಗ್ರಾಮ ಸ್ವರಾಜ್' ಪರಿಕಲ್ಪನೆ ಅಡಿಯಲ್ಲಿ ಗ್ರಾಮಗಳ ಅಭಿವೃದ್ಧಿ ಆದ್ಯತೆ ನೀಡಲಾಗುತ್ತಿದೆ ಎಂದ ಅವರು, ಮಸ್ಕಿ ಮತ್ತು ಬಸವಕಲ್ಯಾಣ ಉಪಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಚುನಾವಣೆ ಸಿದ್ಧತೆಗೆ ಪ್ರಬಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಕಾರ್ಯಕಾರಿಣಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಭಾಗವಹಿಸಿದ್ದರು ಎಂದು ನಳಿನ್ ಕುಮಾರ್ ಕಟೀಲು ಅವರು ವಿವರಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News