ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮತ್ತೆ ನಿರಾಶೆ: 'ಸಂಪುಟ ವಿಸ್ತರಣೆ' ಬಗ್ಗೆ ಸಚಿವ ಅಶೋಕ್ ಹೇಳಿದ್ದೇನು ?

Update: 2020-12-06 12:38 GMT

ಬೆಂಗಳೂರು, ಡಿ. 6: ರಾಜ್ಯ ಸಚಿವ ಸಂಪುಟ ವಿಸ್ತರಣೆ ಒಂದೆರಡು ದಿನಗಳಲ್ಲಿ ಆಗುವ ಸಾಧ್ಯತೆಗಳಿಲ್ಲ. ಈ ಬಗ್ಗೆ ಇನ್ನೂ ವರಿಷ್ಟರ ಅನುಮೋದನೆ ಸಿಕ್ಕಿಲ್ಲ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ರವಿವಾರ ಇಲ್ಲಿನ ಗೋವಿಂದರಾಜನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ಉಸ್ತವಾರಿ ಅರುಣ್ ಸಿಂಗ್ ಅವರು ಪಕ್ಷದ ರಾಜ್ಯ ಘಟಕದ ಕಚೇರಿಯಲ್ಲಿ ಸಚಿವರು, ಶಾಸಕರು ಮತ್ತು ಪ್ರಮುಖ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರವಾಗಿದ್ದರೂ ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು ವರಿಷ್ಟರೊಂದಿಗೆ ಚರ್ಚಿಸಿ ತೀರ್ಮಾನ ಮಾಡಬೇಕಿರುತ್ತದೆ ಎಂದರು.

ಸಚಿವ ಸಂಪುಟ ವಿಸ್ತರಣೆ, ನಿಗಮ–ಮಂಡಳಿಗಳ ನೇಮಕಾತಿ ಸೇರಿದಂತೆ ರಾಜ್ಯದ ಕೆಲ ವಿಚಾರಗಳಿಗೆ ಸಂಬಂಧಿಸಿದಂತೆ ಸಚಿವರು, ಶಾಸಕರು, ಪಕ್ಷದ ಪ್ರಮುಖ ನಾಯಕರ ಅಭಿಪ್ರಾಯ ಆಲಿಸಲು ಹೈಕಮಾಂಡ್ ತೀರ್ಮಾನಿಸಿದೆ. ಹೀಗಾಗಿ ಉಸ್ತುವಾರಿ ಅರುಣ್ ಸಿಂಗ್ ಅವರು ಎಲ್ಲರಿಗೂ ಸಮಯ ನಿಗದಿ ಮಾಡಿದ್ದಾರೆ ಎಂದು ಹೇಳಿದರು.

ಎಲ್ಲರ ಅಭಿಪ್ರಾಯ ಆಲಿಸಿದ ಬಳಿಕ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಿದ್ದಾರೆ. ಅನಂತರ ಬಿಜೆಪಿ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸುವರು. ಆ ಬಳಿಕವೇ ಸಂಪುಟ ವಿಸ್ತರಣೆ ಕುರಿತು ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಅಶೋಕ್ ವಿವರಣೆ ನೀಡಿದರು.

ನಮಗೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರ ಸಹಾಯದ ಅವಶ್ಯಕತೆ ಇಲ್ಲ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಗಳಾಗಿದ್ದಾರೆ. ಅವರೇ ಹುದ್ದೆಯಲ್ಲಿ ಮುಂದುವರಿಯುತ್ತಾರೆ. ಬಿಜೆಪಿಗೆ ಈಗ ಯಾರ ಜತೆಗೂ ಒಳ ಒಪ್ಪಂದವೂ ಬೇಡ, ಹೊರ ಒಪ್ಪಂದವೂ ಅಗತ್ಯವಿಲ್ಲ ಎಂದು ಹೇಳಿದರು.

'ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್‍ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸಲು ವಿಧೇಯಕವನ್ನು ರೂಪಿಸಲಾಗಿದೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಿ ಅದಕ್ಕೆ ಒಪ್ಪಿಗೆ ಪಡೆದುಕೊಳ್ಳಲಾಗುವುದು. ಆ ಬಳಿಕ ಹೊಸ ಕಾಯ್ದೆಯನ್ವಯ ಬಿಬಿಎಂಪಿ ಚುನಾವಣೆ ನಡೆಸಲು ಅವಕಾಶ ಸಿಗಲಿದೆ'

-ಆರ್.ಅಶೋಕ್ ಕಂದಾಯ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News