×
Ad

'ಗೋಹತ್ಯೆ, ಲವ್ ಜಿಹಾದ್' ಕಾಯ್ದೆ ಜಾರಿಗೆ ತರುವುದು ನೀತಿ ಸಂಹಿತೆಯ ಉಲ್ಲಂಘನೆ: ಸಿದ್ದರಾಮಯ್ಯ

Update: 2020-12-06 19:36 IST

ಬೆಂಗಳೂರು, ಡಿ. 6: 'ಗ್ರಾಮ ಪಂಚಾಯತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ನಾಳೆಯಿಂದ ಗ್ರಾ.ಪಂ.ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಈ ವೇಳೆ ಸರಕಾರ ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ತಡೆ ಕಾಯ್ದೆಗಳನ್ನು ಜಾರಿಗೆ ತಂದರೆ ಮತದಾರರ ಮೇಲೆ ಪರಿಣಾಮ ಬೀರಲಿದ್ದು, ನೀತಿ ಸಂಹಿತೆಯ ಉಲ್ಲಂಘನೆಯಾಗಲಿದೆ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ರವಿವಾರ ತಮ್ಮ ಅಧ್ಯಕ್ಷತೆಯಲ್ಲಿ ವಿಧಾನ ಮಂಡಲ ಅಧಿವೇಶನದಲ್ಲಿ ವಿಪಕ್ಷ ಕಾಂಗ್ರೆಸ್ ಅನುಸರಿಸಬೇಕಾದ ಕಾರ್ಯತಂತ್ರದ ಕುರಿತ ಮುಖಂಡ ಸಭೆಯ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, 'ರಾಜ್ಯದ ಹಣಕಾಸು ಸ್ಥಿತಿ ಹದಗೆಟ್ಟಿದೆ. ನೌಕರರ ಸಂಬಳ, ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ವಿವಿಧ ಪಿಂಚಣಿ ನೀಡಲು ಸರಕಾರದ ಬಳಿ ಹಣವಿಲ್ಲ. ಹಾಗಾಗಿ ಈ ಬಾರಿಯ ಅಧಿವೇಶನದಲ್ಲಿ ರಾಜ್ಯದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಸರಕಾರವನ್ನು ಒತ್ತಾಯಿಸುತ್ತೇವೆ' ಎಂದು ಹೇಳಿದರು.

ರಾಜ್ಯ ಸರಕಾರ ಮತ್ತೆ ಈ ಬಾರಿಯ ಅಧಿವೇಶನದಲ್ಲಿ ಕಾರ್ಮಿಕ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯಿದೆಗಳ ಮಂಡನೆ ಮಾಡಲಿದ್ದು, ಅವುಗಳ ಬಗ್ಗೆ ದೀರ್ಘವಾಗಿ ಚರ್ಚಿಸಲಾಗುವುದು. ಯಾವುದೇ ಕಾರಣಕ್ಕೂ ಇಂತಹ ಜನವಿರೋಧಿ, ರೈತವಿರೋಧಿ ಕಾಯ್ದೆಗಳ ಜಾರಿಗೆ ನಾವು ಅವಕಾಶ ನೀಡುವುದಿಲ್ಲ' ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

'ಗೃಹ ನಿರ್ಮಾಣ ಯೋಜನೆಗಳಿಗೆ ಅಗತ್ಯ ಹಣ ಬಿಡುಗಡೆ ಮಾಡುತ್ತಿಲ್ಲ. ಬಿಜೆಪಿ ಸರಕಾರ ತಮ್ಮ ಪಕ್ಷದ ಅರ್ಜಿದಾರರನ್ನು ಗುರುತಿಸಿ ಹಣ ಬಿಡುಗಡೆ ಮಾಡುತ್ತಿದೆ. ಇತರೆ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡವರ ಅರ್ಜಿಗಳನ್ನು ಬಾಕಿ ಇಡಲಾಗಿದೆ. ಇದು ಬಡಜನರಿಗೆ ಮಾಡುತ್ತಿರುವ ದ್ರೋಹ' ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

'ರಾಜ್ಯದ ವಿವಿಧ ಜಿಲ್ಲೆಗಳು ಈ ವರ್ಷ ಮೂರು ಬಾರಿ ಪ್ರವಾಹದಿಂದ ಹಾನಿಗೀಡಾಗಿವೆ, ಈ ವರೆಗೂ ನಷ್ಟಕ್ಕೊಳಗಾದ ಜನರಿಗೆ ಸೂಕ್ತ ಪರಿಹಾರ ನೀಡಿಲ್ಲ. ಜೊತೆಗೆ ಅನೇಕ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು ನೀಡಿಲ್ಲ, ವಿದ್ಯುತ್ ಖರೀದಿಯಲ್ಲಿ ಅವ್ಯವಹಾರ ನಡೆಯುತ್ತಿದೆ. ಈ ಎಲ್ಲಾ ವಿಚಾರಗಳನ್ನು ಸದನದಲ್ಲಿ ಪ್ರಸ್ತಾಪಿಸಲಾಗುವುದು' ಎಂದು ಸಿದ್ದರಾಮಯ್ಯ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News