ಗ್ರಾಪಂ ಚುನಾವಣೆಯ ಪಕ್ಷದ ಅಭ್ಯರ್ಥಿಗಳೆಲ್ಲರೂ ನಾಯಕರೇ: ಪ್ರಮೋದ್ ಮಧ್ವರಾಜ್
ಉಡುಪಿ, ಡಿ.7: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲರೂ ನಾಯಕರೇ ಆಗಿದ್ದಾರೆ. ಗ್ರಾಪಂ ಚುನಾವಣೆಯಲ್ಲಿ ಉತ್ಸಾಹದಿಂದ ಭಾಗವಹಿಸಿ ನಾಯಕರಾಗಲು ಸಿಕ್ಕಿದ ಅವ ಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಗ್ರಾಮ ಪಂಚಾಯತ್ ಚುನಾವಣೆ ಬಗ್ಗೆ ರವಿವಾರ ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡುತಿದ್ದರು.
ಕೆಪಿಸಿಸಿಯ ಸಂಯೋಜಕ, ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊ ರೇಟರ್ ವಿನಯ ರಾಜ್ ಮಾತನಾಡಿ, ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜಾರಿಗೊಳಿಸಿದ ಅನ್ನಭಾಗ್ಯ ಯೋಜನೆಯಲ್ಲಿ ಪಡಿತರ ಚೀಟಿಗೆ ಪ್ರತಿ ಕುಟುಂಬಕ್ಕೆ ನೀಡುವ ಅಕ್ಕಿಯ ಪ್ರಮಾಣ ವನ್ನು ಕಡಿತಗೊಳಿಸಿ ರಾಜ್ಯದ ಬಿಜೆಪಿ ಸರಕಾರ ಜನರಿಗೆ ಅನ್ಯಾಯ ಮಾಡಿದೆ ಎಂದು ದೂರಿದರು.
ಬಿಜೆಪಿ ಸರಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಆದುದರಿಂದ ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಅತೀ ಅವಶ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಸಂವಿಧಾನ ಶಿಲ್ಪಿಡಾ.ಬಿ.ಆರ್.ಅಂಬೇಡ್ಕರ್‌ರವರ ಮಹಾ ಪರಿ ನಿರ್ವಾಣ ದಿನದ ಸ್ಮರಣಾರ್ಥ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸ ಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಪುತ್ರನ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಳಾದ ಬಿ.ನರಸಿಂಹ ಮೂರ್ತಿ, ವೈ.ಸುಕುಮಾರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕುಶಲ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಕೀರ್ತಿ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ಶೆಟ್ಟಿ, ಎಸ್‌ಟಿ ಘಟಕದ ಅಧ್ಯಕ್ಷ ಅನಂತ್ ನಾಯಕ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷ ಸೌರಭ್ ಬಲ್ಲಾಳ್, ನಗರಸಭಾ ಮಾಜಿ ಅಧ್ಯಕ್ಷರಾದ ಯುವರಾಜ್, ಮೀನಾಕ್ಷಿ ಮಾಧವ, ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ಸೆಲಿನ್ ಕರ್ಕಡ, ವಿಜಯ ಪೂಜಾರಿ ಬೈಲೂರು ಮೊದಲಾದವರು ಉಪಸ್ಥಿತರಿದ್ದರು. ಎಸ್.ಸಿ. ಘಟಕದ ಅಧ್ಯಕ್ಷ ಗಣೇಶ್ ನೆರ್ಗಿ ವಂದಿಸಿದರು.