'ಗುಂಡಿ ಬಿದ್ದ ರಸ್ತೆಗಳಲ್ಲಿ ಹೆಣ ಹೂಳುವ ಸ್ಥಿತಿ ನಿರ್ಮಾಣ': ವಿಧಾನಸಭೆಯಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ ಶಾಸಕ

Update: 2020-12-07 14:06 GMT

ಬೆಂಗಳೂರು, ಡಿ. 7: 'ನಗರದ ರಸ್ತೆಗಳು ಗುಂಡಿ ಬಿದ್ದಿದ್ದು, ಸೈಕಲ್‍ನಲ್ಲಿಯೂ ಸವಾರಿ ಮಾಡಲು ಸಾಧ್ಯವಿಲ್ಲ. ರಸ್ತೆಗಳಲ್ಲಿಯೇ ಹೆಣ ಹೂಳುವ ಸ್ಥಿತಿ ನಿರ್ಮಾಣವಾಗಿದೆ, ಶಾಸಕರು ಎಲ್ಲಿಗೆ ಹೋಗಿದ್ದಾರೆಂದು ಕ್ಷೇತ್ರದ ಜನತೆ ಪ್ರಶ್ನೆ ಮಾಡುತ್ತಿದ್ದಾರೆ, ನಾನೇನು ಮಾಡಬೇಕು ಹೇಳಿ' ಎಂದು ಜೆಡಿಎಸ್ ಸದಸ್ಯ ಎಲ್.ಎನ್.ನಿಸರ್ಗ ನಾರಾಯಣಸ್ವಾಮಿ ವಿಧಾನಸಭೆಯಲ್ಲಿ ತಮ್ಮ ಅಸಹಾಯಕತೆಯನ್ನು ಬಹಿರಂಗಪಡಿಸಿದ್ದಾರೆ.

ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಸರಕಾರ ನೀಡಿದ ಉತ್ತರದಿಂದ ತೃಪ್ತರಾಗದ ನಾರಾಯಣಸ್ವಾಮಿ, ಸರಕಾರ ದೇವನಹಳ್ಳಿ ಹಾಗೂ ವಿಜಯಪುರ ಪಟ್ಟಣದ ಮೂಲಕ ಹಾದು ಹೋಗುವ ರಾಜ್ಯ ಹೆದ್ದಾರಿ 96 ಅನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ನಾವು ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ನಗರ ಮತ್ತು ಪಟ್ಟಣಗಳ ರಸ್ತೆಗಳನ್ನು ನಗರಸಭೆ ಹಾಗೂ ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳೇ ನಿರ್ವಹಣೆ ಮಾಡಬೇಕು ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್ ಕಾಗೇರಿ, ಸರಕಾರ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ ಸಂಪನ್ಮೂಲಗಳ ಲಭ್ಯತೆಯನ್ನು ಆಧರಿಸಿ ಇಲಾಖೆಗೆ ಹಂಚಿಕೆ ಮಾಡಿರುವ ಅನುದಾನವನ್ನು ಅತಿವೃಷ್ಟಿ ಮತ್ತು ನೆರೆ ಹಾವಳಿ ಮುಂದುವರಿದ ಕಾಮಗಾರಿಗಳಿಗೆ ಅಗತ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಅನುದಾನ ಕ್ರೋಡೀಕರಿಸಿ ವಾಹನಗಳ ಸಾಂದ್ರತೆ ಪರಿಗಣಿಸಿ ರಸ್ತೆ ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದು ಕಾರಜೋಳ ಸದನಕ್ಕೆ ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News