ಕೋವಿಡ್ ಮಾರ್ಗದರ್ಶಿ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷೆ ಅನುಸರಣೆ: ಕೇಂದ್ರ ಸರಕಾರದಿಂದ ವರದಿ ಕೋರಿದ ಸುಪ್ರೀಂ

Update: 2020-12-09 14:49 GMT

ಹೊಸದಿಲ್ಲಿ, ಡಿ. 8: ಮಾಸ್ಕ್ ಧರಿಸುವ, ಸುರಕ್ಷಿತ ಅಂತರ ಕಾಯ್ದುಕೊಳ್ಳುವ ಕೋವಿಡ್ ಮಾರ್ಗದರ್ಶಿ ಸೂತ್ರಗಳನ್ನು ಅನುಸರಿಸುವುದರಿಂದ ಹಿಡಿದು ಭಾರತಾದ್ಯಂತದ ಆಸ್ಪತ್ರೆ, ನರ್ಸಿಂಗ್ ಹೋಮ್‌ಗಳಲ್ಲಿ ಅಗ್ನಿ ಸುರಕ್ಷಾ ಮಾರ್ಗದರ್ಶಿ ಸೂತ್ರಗಳನ್ನು ಅನುಷ್ಠಾನಗೊಳಿಸುವ ವರೆಗಿನ ವಿಷಯಗಳ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ವಿಸ್ತೃತ ವರದಿ ಕೋರಿತು.

ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವುದು ಹಾಗೂ ಅಲ್ಲಿ ಮೃತ ದೇಹಗಳ ಅಂತ್ಯ ಸಂಸ್ಕಾರವನ್ನು ಗೌರವಯುತವಾಗಿ ನಿರ್ವಹಿಸುವುದನ್ನು ಖಾತರಿಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡ ಪ್ರಕರಣದ ವಿಚಾರಣೆ ನಡೆಸಿತು. ಹಲವು ರೋಗಿಗಳು ಸಾವನ್ನಪ್ಪಲು ಕಾರಣವಾದ ಗುಜರಾತ್ ರಾಜ್‌ಕೋಟ್‌ನ ನಿಯೋಜಿತ ಕೋವಿಡ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬೆಂಕಿ ಆಕಸ್ಮಿಕವನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತೆಗೆದುಕೊಂಡಿತು ಹಾಗೂ ದೇಶಾದ್ಯಂತ ಆಸ್ಪತ್ರೆಗಳಲ್ಲಿ ಸೂಕ್ತ ಅಗ್ನಿ ಸುರಕ್ಷಾ ಕ್ರಮಗಳನ್ನು ಅನುಸರಿಸದೇ ಇರುವ ಬಗ್ಗೆ ಪ್ರಶ್ನಿಸಿತು.

ಕೋವಿಡ್ ಮಾರ್ಗದರ್ಶಿ ಸೂತ್ರಗಳು ಹಾಗೂ ನರ್ಸಿಗ್ ಹೋಮ್, ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷಾ ಕ್ರಮಗಳ ಅನುಷ್ಠಾನದಂತಹ ವಿಷಯಗಳ ಕುರಿತು ಮೂರು ದಿನಗಳಲ್ಲಿ ವಿವರವಾದ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರಕಾರ ಹಾಗೂ ಗುಜರಾತ್ ಸರಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠ ಸೂಚಿಸಿತು. ಈ ವಿಷಯಗಳ ಬಗ್ಗೆ ತೆಗೆದುಕೊಂಡ ಕ್ರಮಗಳ ಕುರಿತು ಕೂಡ ಶುಕ್ರವಾರ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಆರ್.ಎಸ್. ರೆಡ್ಡಿ ಹಾಗೂ ಎಂ.ಆರ್. ಶಾಹ್ ಅವರನ್ನು ಕೂಡ ಒಳಗೊಂಡ ಪೀಠ ರಾಜ್ಯಗಳಿಗೆ ನಿರ್ದೇಶಿಸಿತು ಹಾಗೂ ವಿಚಾರಣೆಯನ್ನು ಡಿಸೆಂಬರ್ 14ಕ್ಕೆ ಮುಂದೂಡಿತು. ರಾಜ್‌ಕೋಟ್‌ನ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ದುರಂತದ ತನಿಖೆಯನ್ನು ಈಗಾಗಲೇ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಡಿ.ಎ. ಮೆಹ್ತಾ ಸಮಿತಿ ಅಹ್ಮದಾಬಾದ್ ಅಗ್ನಿ ದುರಂತದ ಬಗ್ಗೆ ಕೂಡ ತನಿಖೆ ನಡೆಸಲಿದೆ ಎಂದು ಪೀಠ ಹೇಳಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News