ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ: ಸರಕಾರದ ವಿರುದ್ಧ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್

Update: 2020-12-10 16:12 GMT

ಬೆಂಗಳೂರು, ಡಿ.10: ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಳ್ಳಲು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‍ಗೆ ನಿರ್ದೇಶಿಸಿದೆ. 

ವಿಜಯಪುರ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ತೀರ್ಪು ನೀಡುವ ವೇಳೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.

ನ್ಯಾಯಪೀಠವು ಪ್ರತಿಕ್ರಿಯಿಸಿ, ಇತ್ತೀಚೆಗೆ ಚುನಾವಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ಸಂದರ್ಭದಲ್ಲಿ ರಾಜ್ಯ ಸರಕಾರ ನಿಗದಿತ ಅವಧಿಯಲ್ಲಿ ಚುನಾವಣೆಗಳನ್ನು ನಡೆಸದೇ ಇರುವುದು ಕಂಡು ಬಂದಿದೆ. ಗ್ರಾಮ ಪಂಚಾಯಿತಿಗಳು, ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ನಿರ್ದೇಶಿಸುವಂತೆ ಕೋರಿ ಜನರು ಕೋರ್ಟ್ ಮೆಟ್ಟಿಲೇರುತ್ತಿದ್ದಾರೆ. 

ಸಂವಿಧಾನದ ವಿಧಿ 243(ಯು) ಪ್ರಕಾರ ಚುನಾಯಿತ ಸದಸ್ಯರ ಅವಧಿ ಮುಗಿಯುವ ಮುನ್ನವೇ ಚುನಾವಣೆ ನಡೆಸಬೇಕು. ಆದರೆ, ಸರಕಾರ ಚುನಾವಣೆಗಳನ್ನು ನಿಗದಿತ ಅವಧಿಯೊಳಗೆ ನಡೆಸುತ್ತಿಲ್ಲ. ಹೀಗಾಗಿ ರಾಜ್ಯ ಸರಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಸೂಕ್ತ ನಿರ್ದೇಶನ ನೀಡುವ ಅಗತ್ಯವಿದೆ.

ಈ ನಿಟ್ಟಿನಲ್ಲಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶಿಸಿತು. ಹಾಗೆಯೇ ರಾಜ್ಯ ಸರಕಾರ ಮತ್ತು ಚುನಾವಣಾ ಆಯೋಗಗಳನ್ನು ಪ್ರತಿವಾದಿಗಳಾಗಿ ನಮೂದಿಸುವಂತೆ ಸೂಚಿಸಿತು. ಈ ಅರ್ಜಿಯನ್ನು ಡಿ.17ರಂದು ಮುಖ್ಯ ನ್ಯಾಯಮೂರ್ತಿಗಳ ವಿಭಾಗೀಯ ಪೀಠವೇ ವಿಚಾರಣೆ ನಡೆಸಲಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News