ದೇವೇಗೌಡರನ್ನು ಭೇಟಿಯಾದ ಸಿ.ಎಂ.ಇಬ್ರಾಹಿಂ: ರಾಜಕೀಯ ವಲಯದಲ್ಲಿ ಕುತೂಹಲ

Update: 2020-12-14 13:26 GMT

ಬೆಂಗಳೂರು, ಡಿ. 14: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಹಾಲಿ ಸದಸ್ಯ ಸಿ.ಎಂ.ಇಬ್ರಾಹಿಂ, ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಸೃಷ್ಟಿಸಿದ್ದಾರೆ.

ಸಿ.ಎಂ.ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷದಿಂದ ಒಂದು ಕಾಲನ್ನು ಹೊರಗಿಟ್ಟಿದ್ದಾರೆಂಬ ಸೂಚನೆ ಹಿನ್ನೆಲೆಯಲ್ಲಿ ನಿನ್ನೆಯೆಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇಬ್ರಾಹಿಂ ಅವರನ್ನು ಖುದ್ದು ಭೇಟಿ ಮಾಡಿ ಮನವೊಲಿಕೆ ಪ್ರಯತ್ನ ನಡೆಸಿದ್ದರು. ಆದರೆ, ಸೋಮವಾರ ಬೆಳಗ್ಗೆ ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಇಬ್ರಾಹಿಂ, ಅವರೊಂದಿಗೆ ಸಮಾಲೋಚನೆ ನಡೆಸಿರುವುದು ಊಹಾಪೋಹಗಳಿಗೆ ಕಾರಣವಾಗಿದೆ.

ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪಚುನಾವಣೆ ಸೋಲಿನ ಬಳಿಕ ತಟಸ್ಥವಾಗಿದ್ದ ಜೆಡಿಎಸ್ ಇದೀಗ ತನ್ನ ಕಾರ್ಯಚಟುವಟಿಕೆ ಆರಂಭಿಸಿದೆ. ಪ್ರಾದೇಶಿಕ ಪಕ್ಷ ಜೆಡಿಎಸ್ ಅನ್ನು ಉಳಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ಪಕ್ಷದ ವರಿಷ್ಠ ದೇವೇಗೌಡರು ರಾಜಕೀಯ ಕಸರತ್ತು ಆರಂಭಿಸಿದ್ದಾರೆ.

ಈ ಮಧ್ಯೆ ಕಾಂಗ್ರೆಸ್ ಮುಖಂಡರ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ದೇವೇಗೌಡರ ಉಪಸ್ಥಿತಿಯಲ್ಲಿ ಇಬ್ರಾಹಿಂ ಅವರೊಂದಿಗೆ ಮಾತುಕತೆ ನಡೆಸಿರುವುದು ಹೊಸ ಬೆಳವಣಿಗೆಗಳಿಗೆ ಕಾರಣವಾಗಿದೆ.

ಪಕ್ಷಕ್ಕೆ ಆಹ್ವಾನ: ಜೆಡಿಎಸ್ ಪಕ್ಷಕ್ಕೆ ಮರಳಿಬರುವಂತೆ ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ ಅವರಿಗೆ ಆಹ್ವಾನ ನೀಡಿದ್ದಾರೆಂದು ಗೊತ್ತಾಗಿದೆ. ಡಿ.15ರ ಬಳಿಕ ರಾಜ್ಯ ಪ್ರವಾಸ ನಡೆಸಿ ನನ್ನ ನಿರ್ಧಾರ ತಿಳಿಸುವೆ ಎಂದು ಇಬ್ರಾಹಿಂ, ದೇವೇಗೌಡರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News