×
Ad

ಹಿರಿಯ ಬಾಹ್ಯಾಕಾಶ ವಿಜ್ಞಾನಿ ರೊದ್ದಂ ನರಸಿಂಹ ನಿಧನ

Update: 2020-12-15 19:33 IST

ಬೆಂಗಳೂರು, ಡಿ.15: ಹಿರಿಯ ಬಾಹ್ಯಾಕಾಶ ವಿಜ್ಞಾನಿ, ಪದ್ಮ ವಿಭೂಷಣ ಪುರಸ್ಕೃತ ರೊದ್ದಂ ನರಸಿಂಹ (87) ಅನಾರೋಗ್ಯದಿಂದ ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೆದುಳು ರಕ್ತಸ್ರಾವದಿಂದಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಡಿ.8ರಂದು ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೋಮವಾರ ರಾತ್ರಿ 9.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅವರು ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.

ರೊದ್ದಂ ಹಿನ್ನೆಲೆ: 1933ರ ಜುಲೈ 20ರಂದು ಜನಿಸಿದ ಅವರು, 1953ರಲ್ಲಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್‍ನಲ್ಲಿ ಪದವಿ ಪಡೆದಿದ್ದರು. 1955ರಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಏರೋನಾಟಿಕಲ್ ಇಂಜಿನಿಯರಿಂಗ್‍ನಲ್ಲಿ ಡಿಪ್ಲೊಮಾ ಮಾಡಿದ್ದರು. 1962ರಿಂದ 1999ರವರೆಗೆ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಏರೋಸ್ಪೇಸ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿದ್ದರು. 1984ರಿಂದ 1993ರವರೆಗೆ ರಾಷ್ಟ್ರೀಯ ವೈಮಾನಿಕ ಪ್ರಯೋಗಾಲಯ(ಎನ್‍ಎಎಲ್)ನ ನಿರ್ದೇಶಕರಾಗಿದ್ದರು.

ಪ್ರಶಸ್ತಿಗಳು: ಭಟ್ನಾಗರ್ ಪದಕ, ಇಂಡಿಯನ್ ನ್ಯಾಷನಲ್ ಸೈನ್ಸ್ ಅಕಾಡೆಮಿ-1985, ಕನ್ನಡ ರಾಜ್ಯೋತ್ಸವ ಪ್ರಶಸ್ತಿ-1986, ಪದ್ಮಭೂಷಣ-1987, ರಾಯಲ್ ಸೊಸೈಟಿಯ ಫೆಲೋ(ಲಂಡನ್), ವಿಜ್ಞಾನ ಮತ್ತು ತಂತ್ರಜ್ಞಾನ್ಕಕಾಗಿ ನೀಡುವ ಎಂ.ವಿಶ್ವೇಶ್ವರಯ್ಯ ಪ್ರಶಸ್ತಿ ಹಾಗೂ ಪದ್ಮವಿಭೂಷಣ ಪ್ರಶಸ್ತಿಯೂ ಸೇರಿ ಒಟ್ಟು ಅಂತರ್‍ರಾಷ್ಟ್ರೀಯ ಮಟ್ಟದ 62 ಪ್ರಶಸ್ತಿ, ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ಸಂತಾಪ: ರೊದ್ದಂ ನರಸಿಂಹ ನಿಧನಕ್ಕೆ ಎಐಡಿಎಸ್‍ಒ(ಅಲ್ ಇಂಡಿಯಾ ಡೆಮಾಕ್ರಟೆಕ್ ಸ್ಟೂಡೆಂಟ್ ಆರ್ಗನೈಸೇಷನ್) ಸಂತಾಪ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯು. ಭಾರತದಲ್ಲಿ ಮೂಲ ವಿಜ್ಞಾನಗಳನ್ನು ಅಭಿವೃದ್ಧಿಪಡಿಸುವುದು ಹಾಗೂ ಸಮಾಜದಲ್ಲಿ ವೈಜ್ಞಾನಿಕ ಮನೋಭಾವವನ್ನು ರೂಪಿಸುವಲ್ಲಿ ಅವರ ಕೊಡುಗೆ ಅನನ್ಯ. ಅವರ ಅಗಲಿಕೆಯಿಂದ ಮುಖ್ಯವಾಗಿ ವಿದ್ಯಾರ್ಥಿ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News