ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಶಿಷ್ಯವೇತನ ಶೀಘ್ರ ಬಿಡುಗಡೆಗೊಳಿಸಿ: ಎನ್.ಮಂಜುಳಾ ಸೂಚನೆ
ಬೆಂಗಳೂರು, ಡಿ. 15: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಶಿಷ್ಯವೇತನವನ್ನು ಶೀಘ್ರವಾಗಿ ನೀಡುವುದರ ಕುರಿತು ವಿಶೇಷ ಗಮನಹರಿಸಬೇಕೆಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಬೆಂ.ನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುಳಾ ಸೂಚಿಸಿದ್ದಾರೆ.
ಮಂಗಳವಾರ ಬೆಂಗಳೂರು ನಗರ ಜಿಲ್ಲೆಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಬೆಳಕು ಭವನ ಸಭಾಂಗಣದಲ್ಲಿ ಕಂದಾಯ ಇಲಾಖೆ ಮತ್ತು ಜಿ.ಪಂ.ವ್ಯಾಪ್ತಿಯ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯಗಳು ಪುನರಾರಂಭಗೊಳ್ಳಲಿದ್ದು, ಕೋವಿಡ್-19 ಪ್ರಭಾವ ಹೆಚ್ಚಿರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಮಾಜಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ನಿರ್ದೇಶನ ನೀಡಿದರು.
ಕಂದಾಯ ಇಲಾಖೆಯಲ್ಲಿರುವ ಆನ್‍ಲೈನ್ ಸೇವೆಗಳಾದ ಗ್ರಾಮವಾರು ಮುಟೇಶನ್ ಪ್ರಕ್ರಿಯೆಯಲ್ಲಿರುವ ಸರ್ವೇ ನಂಬರ್ ವಹಿವಾಟು ವಿವರ ಹಾಗೂ ಭೂಮಿ ವರ್ಗಾವಣೆ ಸಂಬಂಧ ಬರುವ ಅರ್ಜಿಗಳನ್ನು 30 ದಿನಗಳೊಳಗೆ ಬಗೆಹರಿಸಬೇಕೆಂದ ಅವರು, ಸಕಾಲ ಸೇವೆಯಡಿ ಬರುವ 98 ಇಲಾಖೆಗಳ 1,025 ಸೇವೆಗಳಲ್ಲಿ ಬರುವ ಸಾರ್ವಜನಿಕರ ಅರ್ಜಿ ಅಹವಾಲುಗಳನ್ನು ನಿಗದಿತ ಕಾಲಮಿತಿಯಲ್ಲಿ ಶೀಘ್ರವಾಗಿ ವಿಲೇವಾರಿ ಮಾಡಬೇಕು ಎಂದು ಸಕಾಲ ಮಿಷನ್‍ಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನೀಡಲಾಗುತ್ತಿರುವ ವಿದ್ಯಾರ್ಥಿವೇತನ, ಸಂಧ್ಯಾ ಸುರಕ್ಷಾ ವೇತನ, ಅಂಗವಿಕಲರ ಪಿಂಚಣಿ, ಮನಸ್ವಿ, ಮೈತ್ರಿ ಯೋಜನೆಗಳಲ್ಲಿ 600 ರೂ.ನಿಂದ 1,500 ರೂ.ವರೆಗೆ ಪಿಂಚಣಿ ಸೌಲಭ್ಯ ನೀಡಲಾಗುತ್ತಿದ್ದು, ಈ ಪಿಂಚಣಿಯನ್ನು ನಿಗದಿತ ಅವಧಿಯೊಳಗೆ ಪಾವತಿಸಲು ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.
ಮಕ್ಕಳಲ್ಲಿ ಶೈಕ್ಷಣಿಕ ಸಾಧನೆ ತರಲು ಆನ್‍ಲೈನ್ ತರಗತಿಗಳನ್ನು ಆರಂಭಿಸಿ ಪಠ್ಯಕ್ರಮಗಳನ್ನು ಮೌಲ್ಯಮಾಪನ ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದ ಅವರು, ಆರೋಗ್ಯ ಇಲಾಖೆ ವತಿಯಿಂದ ಮಕ್ಕಳಿಗೆ ನೀಡಲಾಗುವ ಲಸಿಕೆಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನೀಡಲಾಗುತ್ತಿದ್ದು, ಮಾತೃಶ್ರೀ ಯೋಜನೆಯಡಿಯಲ್ಲಿ ತಾಯಂದಿರ ಪೋಷಣೆಗಾಗಿ 6 ಸಾವಿರ ರೂ.ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಈ ಯೋಜನೆಯನ್ನು ಸಮರ್ಪಕವಾಗಿ ನಿರ್ವಹಿಸಿ ಸಾರ್ವಜನಿಕರಿಗೆ ತಲುಪಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ, ಅಪರ ಜಿಲ್ಲಾಧಿಕಾರಿಗಳಾದ ಅನಿತಾಲಕ್ಷ್ಮಿ, ಮುಖ್ಯ ಕಾರ್ಯನಿವಾಹಕ ಅಧಿಕಾರಿ ಕೆ.ಶಿವರಾಮೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶ್ರೀನಿವಾಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.