ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಶಾಲಾ ಶಿಕ್ಷಕರ ಧರಣಿ

Update: 2020-12-16 14:54 GMT

ಬೆಂಗಳೂರು, ಡಿ.16: ಕೋವಿಡ್ ಲಾಕ್‍ಡೌನ್‍ನಿಂದಾಗಿ ಸಂಕಷ್ಟ ಅನುಭವಿಸುತ್ತಿರುವ ಖಾಸಗಿ ಶಾಲಾ ಶಿಕ್ಷಕರಿಗೆ ಗೌರವಧನ ನೀಡಬೇಕು. ಶಿಕ್ಷಕರನ್ನು ಕೊರೋನ ವಾರಿಯರ್ಸ್‍ಗಳೆಂದು ಪರಿಗಣಿಸಿ, ಮೊದಲ ಹಂತದಲ್ಲಿಯೇ ಕೋವಿಡ್ ಲಸಿಕೆಯನ್ನು ನೀಡಬೇಕೆಂದು ಒತ್ತಾಯಿಸಿ ಖಾಸಗಿ ಶಾಲಾ ಶಿಕ್ಷಕರು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಮೌರ್ಯ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಪ್ರತಿಭಟನಾ ಜಾಥಾ ನಡೆಸಿದ ಸಾವಿರಾರು ಶಾಲಾ ಶಿಕ್ಷಕರು, ಕೋವಿಡ್ ಲಾಕ್‍ಡೌನ್‍ನಿಂದಾಗಿ ಕೆಲಸವಿಲ್ಲದೆ ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದೇವೆ. ಜೀವನ ನಿರ್ವಹಣೆಗಾಗಿ ತರಕಾರಿ, ಆಟೋ ಡ್ರೈವರ್ ಆಗಿ ಕಾರ್ಯನಿರ್ವಹಿಸಿದ್ದೇವೆ. ಆದರೂ ನಮ್ಮ ಸಮಸ್ಯೆಗಳು ಪರಿಹಾರವಾಗಿಲ್ಲ. ಹೀಗಾಗಿ ರಾಜ್ಯ ಸರಕಾರ ನಮ್ಮ ಬಗ್ಗೆ ವಿಶೇಷ ಗಮನ ಕೊಡಬೇಕೆಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ.

ಈ ವೇಳೆ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಕಾರ್ಯದರ್ಶಿ ಶಶಿಕುಮಾರ್ ಮಾತನಾಡಿ, ಕೋವಿಡ್ ಲಾಕ್‍ಡೌನ್ ಶಾಲಾ ಆಡಳಿತ ಮಂಡಳಿ ಹಾಗೂ ಶಾಲಾ ಶಿಕ್ಷಕರಿಗೆ ಊಹಿಸಲಾಗದಷ್ಟು ಸಮಸ್ಯೆಗಳಾಗಿವೆ. ಶಿಕ್ಷಕರು ಹಾಗೂ ಶಿಕ್ಷಕೇತರರ ಪರಿಸ್ಥಿತಿ ಶೋಚನೀಯವಾಗಿದೆ. ಇಂತಹ ಸಮಯದಲ್ಲಿ ಸರಕಾರದ ಸಹಾಯ ಇಲ್ಲದಿದ್ದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಬಹುದೆಂದು ಆತಂಕ ವ್ಯಕ್ತಪಡಿಸಿದ್ದಾರೆ.

ಶಿಕ್ಷಕರ ಕೇವಲ ಕೋವಿಡ್ ಪರಿಹಾರ ಕೊಟ್ಟರೆ ಸಾಲದು, ಮುಂದಿನ ದಿನಗಳಲ್ಲಿ ಇಂತಹ ಸಮಸ್ಯೆ ಎದುರಾಗದಂತೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಆರೋಗ್ಯ ವಿಮೆ ಕಲ್ಪಿಸಬೇಕು. ಖಾಸಗಿ ಶಾಲೆಗಳಿಗೆ ವಿಶೇಷ ಅನುದಾನ ನೀಡುವುದು ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. ಈ ವೇಳೆ ಶಿಕ್ಷಕರು ತಳ್ಳುವ ಗಾಡಿಯಲ್ಲಿ ಪ್ರತಿಭಟನಾ ಜಾಥಾದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News