ಬೆಂಗಳೂರಿನಲ್ಲಿ ಕಾರ್ಮಿಕರ ಮೇಲೆ ದುಷ್ಕರ್ಮಿಗಳ ದಾಳಿ: ಬಾಲಕ ಮೃತ್ಯು, ತಾಯಿ ಗಂಭೀರ
ಬೆಂಗಳೂರು, ಡಿ.17: ಕಟ್ಟಡ ನಿರ್ಮಾಣ ಕಾರ್ಮಿಕರ ಮೇಲೆ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿ, ಮಾರಣಾಂತಿಕ ಹಲ್ಲೆ ನಡೆಸಿರುವ ಪರಿಣಾಮ 12 ವರ್ಷದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಇಲ್ಲಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಳ್ಳಾರಿಯ ಶಿರುಗುಪ್ಪ ಮೂಲದ ಹನುಮಂತಮ್ಮ ಹಾಗೂ ಬಸವರಾಜ ದಂಪತಿ ಕೆಲ ವರ್ಷಗಳಿದ ನಗರದಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕೆಲ ತಿಂಗಳಿಂದ ಜ್ಞಾನಗಂಗಾ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಶೆಡ್‍ವೊಂದರಲ್ಲಿ ವಾಸವಾಗಿದ್ದರು ಎನ್ನಲಾಗಿದೆ.
ಬುಧವಾರ ರಾತ್ರಿ ಹನುಮಂತಮ್ಮ ಹಾಗೂ 12 ವರ್ಷದ ಪುತ್ರ ಮನೆಯಲ್ಲಿದ್ದ ವೇಳೆ ದಾಳಿ ನಡೆಸಿರುವ ದುಷ್ಕರ್ಮಿಗಳ ತಂಡ ಗಂಭೀರ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ಇವರನ್ನು ದಾಖಲಿಸಿತ್ತಾದರೂ ಬಾಲಕ ಮೃತಪಟ್ಟಿದ್ದು, ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಜ್ಞಾನ ಭಾರತಿ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.