×
Ad

ಗ್ರಾ.ಪಂ ಚುನಾವಣೆ: ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ !

Update: 2020-12-17 21:25 IST

ಮಡಿಕೇರಿ, ಡಿ.17: ಗ್ರಾಮ ಪಂಚಾಯತ್ ಚುನಾವಣೆಗೆ ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಪಾಲಿಬೆಟ್ಟ ಪಂಚಾಯತ್ ನಲ್ಲಿ ನಡೆದಿದೆ.

ವೀರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪಿ.ಪಿ.ಬೋಪಣ್ಣ ಜೈಲಿನಿಂದ ನಾಮಪತ್ರ ಸಲ್ಲಿಸಿದವರಾಗಿದ್ದಾರೆ.

ಪಾಲಿಬೆಟ್ಟ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಎರಡು ಅವಧಿಯಲ್ಲಿ (10 ವರ್ಷ) ಸೇವೆ ಸಲ್ಲಿಸುವುದರೊಂದಿಗೆ ಸ್ವಚ್ಛ ಭಾರತ್ ಅಭಿಯಾನದಡಿ ಪಂಚಾಯತ್ ರಾಷ್ಟ್ರ ಪ್ರಶಸ್ತಿಗೆ ಬೋಪಣ್ಣ ಕಾರಣರಾಗಿದ್ದರು. ಈ ಬಾರಿಯೂ ಗ್ರಾ.ಪಂ. ಚುನಾವಣೆಗೆ ಸ್ಪರ್ಧಿಸಲು ಎಲ್ಲಾ ತಯಾರಿ ಮಾಡಿಕೊಂಡಿದ್ದ ಅವರು ದೌರ್ಜನ್ಯ ಪ್ರಕರಣದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು. ಜಾಮೀನು ಪಡೆಯಲು ಮಡಿಕೇರಿಯ ವಕೀಲರ ಸಂಘದ ಅಧ್ಯಕ್ಷ ಕವನ್ ಅವರ ಮೂಲಕ ಕೊನೆ ಕ್ಷಣದವರೆಗೆ ಪ್ರಯತ್ನಿಸಿದರೂ ಜಾಮೀನು ಸಿಗದ ಹಿನ್ನೆಲೆಯಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸಾಧ್ಯವಾಗಲಿಲ್ಲ.

ಕೊನೆಗೆ ನ್ಯಾಯಾಲಯದ ಒಪ್ಪಿಗೆ ಪಡೆದು ಸೂಚಕರ ಸಹಾಯದಿಂದ ಅವರು ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಧರ್ಮಜ ಉತ್ತಪ್ಪ ನಾಮಪತ್ರ ಸಲ್ಲಿಕೆಗೆ ಅಗತ್ಯವಾದ ವ್ಯವಸ್ಥೆ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News