ಶಾಲೆಗಳ ಪುನರಾರಂಭದ ಬಗ್ಗೆ ಶನಿವಾರ ಸಿಎಂ ಬಿಎಸ್‌ವೈ ನೇತೃತ್ವದಲ್ಲಿ ಮಹತ್ವದ ಸಭೆ
ಬೆಂಗಳೂರು, ಡಿ.18: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಂತ್ರಿಕ ಸಲಹಾ ಸಮಿತಿಯು ಜ.1ರಿಂದ ಶಾಲೆಗಳನ್ನು ಆರಂಭಿಸಬಹುದು ಎಂಬ ಸಲಹೆ ನೀಡಿರುವ ಹಿನ್ನೆಲೆಯಲ್ಲಿ, ಶಾಲೆಗಳ ಪುನರಾರಂಭ ಸಂಬಂಧ ನಾಳೆ(ಡಿ.19) ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳ ಮಹತ್ವ ಸಭೆ ನಡೆಯಲಿದೆ.
ಶನಿವಾರ ಮಧ್ಯಾಹ್ನ ಕೃಷ್ಣಾದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಎಸೆಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳ ಸ್ಥಿತಿಗತಿ ನೋಡಿಕೊಂಡು ಉಳಿದ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಯಲಿದೆ.
ಶಾಲೆಗಳ ಆರಂಭ ಮಾಡುವ ಕುರಿತು ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಈಗಾಗಲೇ ಆರೋಗ್ಯ ಇಲಾಖೆ ಹೊಸ ವರ್ಷದಿಂದ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಕಾರಣ ನಾಳಿನ ಸಭೆ ಮಹತ್ವ ಪಡೆದುಕೊಂಡಿದೆ. ನಾಳಿನ ಸಭೆಯ ಬಳಿಕ ಶಾಲೆ ಆರಂಭದ ಬಗ್ಗೆ ಸರಕಾರದಿಂದ ಅಧಿಕೃತ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.
ಜ.1ರಿಂದ ಶಾಲೆಗಳನ್ನು ಆರಂಭಿಸಲು ಸೂಚನೆ: ಕೊರೋನ ಕಾರಣದಿಂದಾಗಿ ರಾಜ್ಯದಲ್ಲಿ ಬಾಗಿಲು ಹಾಕಿದ್ದ ಶಾಲಾ-ಕಾಲೇಜುಗಳು ಇದುವರೆಗೂ ಆರಂಭವಾಗಿಲ್ಲ. ಇದೀಗ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಶೈಕ್ಷಣಿಕ ಸಾಲಿನ ಕಾರಣಕ್ಕೆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲಾ-ಕಾಲೇಜು ಆರಂಭ ಅನಿರ್ವಾಯವಾಗಿದೆ. ಹೀಗಾಗಿ, ಜ.1ರಿಂದ ಶಾಲೆಗಳನ್ನು ಆರಂಭ ಮಾಡಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ಸೂಚನೆ ನೀಡಿದೆ.
ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದು, 9,10,12 ತರಗತಿ ಶಾಲೆಗಳನ್ನು ತೆರೆಯುವಂತೆ ಸೂಚಿಸಲಾಗಿದೆ. ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲು ಕೋರಿದ್ದಾರೆ.