ತ್ರಾಸಿ ಜಂಕ್ಷನ್‌ನಲ್ಲಿ ಅಪಘಾತ: ಮೂವರಿಗೆ ಗಂಭೀರ ಗಾಯ
ಕುಂದಾಪುರ, ಡಿ.19: ಕಾರು ಹಾಗೂ ರಿಕ್ಷಾ ಮಧ್ಯೆ ಇಂದು ಮಧ್ಯಾಹ್ನ ವೇಳೆ ತ್ರಾಸಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ತೀವ್ರ ವಾಗಿ ಗಾಯಗೊಂಡ ಬಗ್ಗೆ ವರದಿಯಾಗಿದೆ.
ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು, ತ್ರಾಸಿಯಿಂದ ಮೊವಾಡಿಗೆ ಹೋಗಲು ರಾಷ್ಟ್ರೀಯ ಹೆದ್ದಾರಿ ಯನ್ನು ದಾಟುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತ್ತನ್ನಲಾಗಿದೆ. ಇದರಿಂದ ರಿಕ್ಷಾ ಚಾಲಕ ಮತ್ತು ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯ ಗೊಂಡಿರುವುದಾಗಿ ತಿಳಿದು ಬಂದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಆಪತ್ಭಾಂದವ ಆಂಬುಲೆನ್ಸ್ ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ಸಾಗಿಸಿದೆ. ಅಪಘಾತದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ ನೂರಾರು ಸಂಖ್ಯೆಯ ಸಾರ್ವಜನಿಕರು ಕೆಲಕಾಲ ಹೆದ್ದಾರಿ ತಡೆ ನಡೆಸಿ ಪ್ರತಿಭಟಿಸಿದರು. ಈ ಕ್ರಾಸಿಂಗ್‌ನಲ್ಲಿ ಪ್ರತಿದಿನ ಅಪಘಾತ ಸಂಭವಿಸಲು ಇಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಲಾದ ಕ್ರಾಸಿಂಗ್ ಕಾರಣ. ಆದುದರಿಂದ ಕಾಮಗಾರಿ ಗುತ್ತಿಗೆ ವಹಿಸಿರುವ ಕಂಪೆನಿಯವರು ಕೂಡಲೇ ಸ್ಥಳಕ್ಕೆ ಆಗವಿುಸಬೇಕು ಎಂದು ಪಟ್ಟು ಹಿಡಿದರು.
ಇದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣ ವಾಯಿತು. ಸ್ಥಳಕ್ಕೆ ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಗಂಗೊಳ್ಳಿ ಠಾಣಾಧಿಕಾರಿ ಭೀಮಾಶಂಕರ ಹಾಗೂ ಹೈವೆ ಪ್ಯಾಟ್ರೋಲ್‌ನ ಉಸ್ತುವಾರಿ ಎಎಸ್ಸೈ ಆನಂದ್ ಬೈಂದೂರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸಿ ದರು. ಬಳಿಕ ಪೊಲೀಸ್ ಅಧಿಕಾರಿಗಳು ನೀಡಿದ ಭರವಸೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಪ್ರತಿಭಟನೆ ಕೈಬಿಟ್ಟು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.