ನಾಲ್ಕು ರಾಜ್ಯಗಳಲ್ಲಿ ನಾಯಕತ್ವದ ಬದಲಾವಣೆಗೆ ಕಾಂಗ್ರೆಸ್ ಚಾಲನೆ
ಹೊಸದಿಲ್ಲಿ: ಶನಿವಾರ ಪಕ್ಷದ ಭಿನ್ನಮತೀಯರೊಂದಿಗೆ ಸಭೆ ನಡೆಸಿದ ಬಳಿಕ ಕಾಂಗ್ರೆಸ್ ಪಕ್ಷ ತನ್ನ ಸಾಂಸ್ಥಿಕ ನಾಯಕತ್ವ ಬದಲಾವಣೆಗೆ ಮುಂದಾಗಿದೆ. ನಾಲ್ಕು ರಾಜ್ಯಗಳಾದ ತೆಲಂಗಾಣ, ಗುಜರಾತ್, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿನ ನಾಯಕತ್ವವನ್ನು ಕೂಲಂಕುಷವಾಗಿ ಪರಿಶೀಲಿಸಿದೆ. ನಾಲ್ಕು ರಾಜ್ಯಗಳಲ್ಲಿ ನಾಯಕತ್ವದ ಬದಲಾವಣೆ ಹಾಗೂ ಪುನರ್ ರಚನೆಗೆ ಕಾಂಗ್ರೆಸ್ ಚಾಲನೆ ನೀಡಿದೆ.
ಹೈದರಾಬಾದ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಸೋಲಿನ ನೈತಿಕ ಹೊಣೆಹೊತ್ತು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಉತ್ತಮ್‌ಕುಮಾರ್ ರೆಡ್ಡಿ ರಾಜೀನಾಮೆ ನೀಡಿದ್ದಾರೆ. ಗುಜರಾತ್ ಉಪ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆಗೆ ಬೇಸತ್ತು ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಚಾವ್ಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್ ಅವರು ಸಿಎಲ್‌ಪಿ ನಾಯಕತ್ವದ ಜೊತೆಗೆ ರಾಜ್ಯಾಧ್ಯಕ್ಷನಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಕಮಲನಾಥ್ ಅಸಮಾಧಾನಿತ 23 ನಾಯಕರೊಂದಿಗೆ ಸೋನಿಯಾ ಗಾಂಧಿ ಮಾತುಕತೆ ನಡೆಸಲು ಪ್ರಮುಖ ಪಾತ್ರವಹಿಸಿದ್ದರು.
ಶನಿವಾರದಂದು ಮುಂಬೈನ ಪ್ರಾದೇಶಿಕ ಕಾಂಗ್ರೆಸ್ ಸಮಿತಿಯಲ್ಲಿ ಬದಲಾವಣೆ ಮಾಡಲಾಗಿದೆ. ಬಾಳಾ ಸಾಹೇಬ್ ಥೋರಟ್ ಅವರು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜೊತೆಗೆ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಕಾಂಗ್ರೆಸ್‌ನ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಅಸ್ಸಾಂ ಹಾಗೂ ಕೇರಳ ರಾಜ್ಯಗಳಿಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಕಾರ್ಯದರ್ಶಿಗಳನ್ನು ನೇಮಕ ಮಾಡಿದ್ದಾರೆ. ಮೂವರು ಕಾರ್ಯದರ್ಶಿಗಳು ಅಸ್ಸಾಂ ಹಾಗೂ ಕೇರಳ ರಾಜ್ಯದ ಪ್ರಧಾನ ಕಾರ್ಯದರ್ಶಿಗಳಾಗಿರುವ ಜಿತೇಂದ್ರ ಸಿಂಗ್ ಹಾಗೂ ತಾರಿಖ್ ಅನ್ವರ್ ಅವರಿಗೆ ಸಹಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.