×
Ad

ಉಡುಪಿ: ಕ್ರಿಸ್‌ಮಸ್, ಹೊಸ ವರ್ಷ ಆಚರಣೆಗೆ ಕೋವಿಡ್ ಮಾರ್ಗಸೂಚಿ ಪ್ರಕಟ

Update: 2020-12-21 19:59 IST

ಉಡುಪಿ, ಡಿ.21: ಕೋವಿಡ್ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳವಾಗಿ ಹಾಗೂ ಅರ್ಥಗರ್ಭಿತವಾಗಿ ಆಚರಿಸುವ ಸಲುವಾಗಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

ಕ್ರಿಸ್ಮಸ್ ಸಂಭ್ರಮಾಚರಣೆಗಾಗಿ ಚರ್ಚ್‌ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮೇಲ್ವಿಚಾರ ಕರು ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಹಬ್ಬದ ಆಚರಣೆಯ ಸಂದರ್ಭದಲ್ಲಿ ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಲಾಗಿದೆ.

ಡಿ.30ರಿಂದ ಜನವರಿ 2ರವರೆಗೆ ಕ್ಲಬ್/ಪಬ್/ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಪ್ರದೇಶಗಳಲ್ಲಿ ಸುರಕ್ಷತಾ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ವಿಶೇಷ ಡಿಜೆ-ಡಾನ್ಸ್ ಕಾರ್ಯಕ್ರಮ, ವಿಶೇಷ ಪಾರ್ಟಿ ಇತ್ಯಾದಿಗಳನ್ನು ನಿಷೇಧಿಸಲಾಗಿದ್ದು, ಕ್ಲಬ್/ಪಬ್/ ರೆಸ್ಟೋರೆಂಟ್‌ಗಳನ್ನು ಪ್ರತಿನಿತ್ಯದಂತೆ ತೆರೆದಿಟ್ಟು ನಡೆಸಲು ನಿರ್ಬಂಧವಿರುವುದಿಲ್ಲ.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳ, ಮುಖ್ಯ ರಸ್ತೆಗಳಲ್ಲಿ ಸುರಕ್ಷತಾ ಅಂತರವಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸೇರುವಿಕೆ ಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಲಾಗಿದ್ದು, ಈ ಸ್ಥಳಗಳಲ್ಲಿ ಪ್ರತಿನಿತ್ಯದ ಸಾಮಾನ್ಯ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ನಿರ್ಬಂಧವಿಲ್ಲ.

ಆಯ್ದ ರಸ್ತೆ ಸ್ಥಳಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬಹುದು. ಸರಕಾರದ ಆದೇಶದಂತೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅದರಂತೆ 65 ವರ್ಷ ಮೇಲ್ಪಟ್ಟ ಹಿರಿಯರು ಮತ್ತು 10ವರ್ಷದೊಳಗಿನ ಮಕ್ಕಳು ಮನೆಯಲ್ಲೇ ಇರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸುರಕ್ಷತಾ ಅಂತರವನ್ನು ಕಾಯ್ದು ಕೊಳ್ಳುವುದು ಮತ್ತು ಹೋಟೆಲ್/ಮಾಲ್/ ಪಬ್/ ರೆಸ್ಟೋರೆಂಟ್‌ಗಳಲ್ಲಿ ಥರ್ಮಲ್ ಸ್ಕೃಿನಿಂಗ್ ಹಾಗೂ ಸ್ಯಾನಟೈಸರ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಇರಿಸಬೇಕು.

ಹೋಟೆಲ್/ಮಾಲ್/ಪಬ್/ರೆಸ್ಟೋರೆಂಟ್‌ಗಳ ಮಾಲಕರು, ಕಡ್ಡಾಯ ವಾಗಿ ಸರಕಾರದ ಆದೇಶದಂತೆ ಕೋವಿಡ್-19 ರ ನಿಯಂತ್ರಣಕ್ಕಾಗಿ ಸುರಕ್ಷತಾ ಅಂತರ ಕಾಯ್ದುಕೊಂಡು ಜನ ಸೇರುವಂತೆ ಜಾಗ್ರತೆ ವಹಿಸಬೇಕು. ಅಗತ್ಯವಿದ್ದಲ್ಲಿ ಜನರನ್ನು ಸರದಿಯಲ್ಲಿ ಪ್ರವೇಶಿಸಲು ಅಥವಾ ಆನ್‌ಲೈನ್ ಮುಖಾಂತರ / ಟೋಕನ್ ಪದ್ಧತಿಯಲ್ಲಿ ಸ್ಥಳ ಕಾಯ್ದಿರಿಸಲು ವ್ಯವಸ್ಥೆ ಕಲ್ಪಿಸಬೇಕು.

ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಸಂಬಂಧಪಟ್ಟ ಪ್ರಾಧಿಕಾರಗಳು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿ ಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ/ ಕಾರ್ಪೋ ರೇಷನ್/ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿ ಳನ್ನು ಕಡ್ಡಾಯವಾಗಿ ಪಾಲಿಸಬೇಕು.

ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರದ ಆದೇಶ/ ಮಾರ್ಗ ಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News