ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಿ: ಪ್ರೊ.ಸಾಮಗ
ಉಡುಪಿ, ಡಿ.21: ಮಕ್ಕಳಲ್ಲಿರುವ ಪ್ರತಿಭೆಗಳನ್ನು ಪೋಷಿಸಿ, ಪ್ರೋತ್ಸಾಹಿಸಿ ಹೆಮ್ಮರವಾಗಿ ಬೆಳೆಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ.ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಯಕ್ಷಗಾನ ಕಲಾ ಕೇಂದ್ರ ಇಂತಹ ಬಾಲ ಪ್ರತಿಭೆಗಳ ಕಾರ್ಯಕ್ರಮಗಳನ್ನು ಇನ್ನೂ ಹೆಚ್ಚು ಹಮ್ಮಿಕೊಳ್ಳವುದು ಸೂಕ್ತ ಎಂದು ಹಿರಿಯ ಕಲಾವಿದ ಹಾಗೂ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ.ಎಲ್.ಸಾಮಗ ಹೇಳಿದ್ದಾರೆ.
ರವಿವಾರ ಉಡುಪಿಯ ಇಂದ್ರಾಳಿ ಯಕ್ಷಗಾನ ಕೇಂದ್ರದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಯಕ್ಷಗಾನ ಕೇಂದ್ರ ಉಡುಪಿ ಇವರ ಸಹಯೋಗದೊಂದಿಗೆ ನಡೆದ ‘ಚಿಗುರು’ ಬಾಲಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಉಡುಪಿ ಯಕ್ಷಗಾನ ಕೇಂದ್ರದ ಸಂಯೋಜಕ ವರದೇಶ್ ಹಿರೇಗಂಗೆ ಮಾತನಾಡಿ, ಕೇವಲ ಓದು ಒಂದೇ ಮಕ್ಕಳ ಗುರಿಯಾಗದೆ ಅವರಲ್ಲಿರುವ ಆಸಕ್ತಿಯನ್ನು ಗುರುತಿಸಿ ಪೋಷಕರು ಪ್ರೋತ್ಸಾಹಿಸುವುದರ ಜೊತೆಗೆ ಅವರ ಬೇರೆ-ಬೇರೆ ಕಲಾಪ್ರಕಾರಗಳಿಗೆ ಮುಕ್ತ ಅವಕಾಶ ಕಲ್ಪಿಸಿ ಕೊಡಬೇಕು ಎಂದರು.
ಕಾರ್ಯಕ್ರಮದಲ್ಲಿ ಸಾಹಿತಿ ಮೇಟಿ ಮುದಿಯಪ್ಪ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ, ಮಂಗಳೂರು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸದಸ್ಯೆ ಪೂರ್ಣಿಮಾ ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಮತ್ತಿತರರು ಉಪಸ್ಥಿತರಿದ್ದರು.