×
Ad

ಮಹಿಳಾ ಕಿರುಕುಳ ಕಂಡುಬಂದಲ್ಲಿ ದೂರು ನೀಡಿ: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ

Update: 2020-12-21 20:35 IST

ಮಂಗಳೂರು, ಡಿ.21: ಕಚೇರಿಗಳಲ್ಲಿ ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ದೂರು ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್. ಕುಂದರ್ ಸೂಚನೆ ನೀಡಿದ್ದಾರೆ.

ನಗರದಲ್ಲಿನ ಜಿಪಂ ಕಚೇರಿಯಲ್ಲಿ ಸೋಮವಾರ ನಡೆದ ‘ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ’ ಕುರಿತ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಸಖಿ ಕೇಂದ್ರದಲ್ಲಿ ಒಂದೇ ಸೂರಿನಡಿ ಮಹಿಳೆಯರಿಗೆ ಆಪ್ತ ಸಮಾಲೋಚನೆ, ಕಾನೂನು ನೆರವು, ಪೊಲೀಸ್ ನೆರವು, ತಾತ್ಕಾಲಿಕ ಆಶ್ರಯ ಗಳನ್ನು ಒದಗಿಸಲಾಗುತ್ತಿದೆ. ಸಖಿ ಕೇಂದ್ರದ ಸ್ವಂತ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಕಟ್ಟಡವು ಇಲಾಖೆಗೆ ಹಸ್ತಾಂತರಗೊಂಡ ಕೂಡಲೇ ಉದ್ಘಾಟನೆ ನಡೆಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಿದರು.

ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ 2013ರಡಿ 10ಕ್ಕಿಂತ ಕಡಿಮೆ ಮಹಿಳಾ ಉದ್ಯೋಗಿಗಳು ಇರುವ ಸರಕಾರಿ, ಖಾಸಗಿ ಕಚೇರಿಗಳು, ನಿಗಮ, ಮಂಡಳಿ, ಸಾರ್ವಜನಿಕ ಉದ್ಯಮಗಳು, ಫ್ಯಾಕ್ಟರಿ ಸೇರಿದಂತೆ ಎಲ್ಲ ಕಚೇರಿಗಳಲ್ಲೂ ಕಡ್ಡಾಯವಾಗಿ ಆಂತರಿಕ ದೂರು ಸಮಿತಿಯನ್ನು ರಚಿಸುವಂತೆ ತಿಳಿಸಿದರು.

ಜಿಲ್ಲಾ ಲೇಡಿಗೋಶನ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಖಿ ಕೇಂದ್ರಕ್ಕೆ ಭೇಟಿ ನೀಡಿ ದಾಖಲಾಗಿರುವ ಪ್ರಕರಣಗಳ ಬಗ್ಗೆ ಮಾಹಿತಿ ಯನ್ನು ಪಡೆದ ಅವರು, ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿ, ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಲೇಡಿಗೋಶನ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಶಕುಂತಲಾ ಎಂ.ಎಂ., ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿಯ ಇಲಾಖೆಯ ಉಪನಿರ್ದೇಶಕ ಪಾಪಭೋವಿ, ಸಖಿ ಕೇಂದ್ರದ ಸೆಂಟರ್ ಅಡ್ಮಿನಿಸ್ಟ್ರೇಟರ್ ಮತ್ತಿತರರು ಉಪಸ್ಥಿತರಿದ್ಧರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News