ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಮುಖಂಡರ ಪ್ರತಿಭಟನೆ
ಬೆಂಗಳೂರು, ಡಿ.22: ಮೂಲಸಮಸ್ಯೆಗಳಿಗೆ ಪರಿಹಾರ ನೀಡದೆ, ಜನರನ್ನು ದಿಕ್ಕು ತಪ್ಪಿಸುವ ರೀತಿ ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದಾರೆಂದು ಆರೋಪಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳವಾರ ನಗರದ ರೇಸ್‍ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ ಮುಂಭಾಗ ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಮುಖಂಡರು, ಬಿಜೆಪಿ ಪಕ್ಷದ ನಾಯಕರು ಸಚಿವರು ಜನರ ಸಮಸ್ಯೆಯನ್ನು ಬಗೆಹರಿಸದೆ ಉದ್ದೇಶಪೂರ್ವಕವಾಗಿ ಅನಗತ್ಯ ಮಾತುಗಳಿಂದ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ಗೋಹತ್ಯೆ ವಿರೋಧಿ ಕಾನೂನು ವಿಷಯವನ್ನು ಪ್ರಸ್ತಾಪಿಸಿ ಜನರ ಗಮನವನ್ನು ಬೇರೆಡೆಗೆ ಸೆಳೆದಿದ್ದಾರೆ. ಆದರೆ, ದೇಶದ ಅನ್ನದಾತರು ತಮ್ಮ ಬೇಡಿಕೆಯನ್ನು ಈಡೇರಿಸಬೇಕೆಂದು ಒತ್ತಾಯಿಸಿ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಆ ಕಡೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ವಾಗ್ದಾಳಿ ನಡೆಸಿದರು.
ಜನರ ಪರ ಮಾತನಾಡುವ ಕಾಂಗ್ರೆಸ್ ನಾಯಕರನ್ನ ಅನ್ನದಾತರ ಪರ ಕೈಜೋಡಿಸುವ ರಾಹುಲ್ ಗಾಂಧಿ ಅವರ ನಡೆಯನ್ನು ಟೀಕಿಸಿರುವ ಬಿಜೆಪಿ ನಾಯಕರ ವರ್ತನೆಯೂ ಸರಿಯಿಲ್ಲ. ಅಲ್ಲದೆ, ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳಿನ ಅಪ ಪ್ರಚಾರ ಈ ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಮಿತಿಯ ಮುಖ್ಯಸ್ಥರಾದ ಎಂ.ರಾಮಚಂದ್ರಪ್ಪ, ಎಸ್.ಮನೋಹರ್, ಜಿ.ಜನಾರ್ದನ್, ಎ.ಆನಂದ್, ಶೇಖರ್, ಎಂ.ಎ.ಸಲೀಂ ಸೇರಿದಂತೆ ಪ್ರಮುಖರಿದ್ದರು.