ಕುಮಾರಸ್ವಾಮಿ, ಡಿಕೆಶಿ, ಪರಮೇಶ್ವರ್ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

Update: 2020-12-23 16:09 GMT
File Photo

ಬೆಂಗಳೂರು, ಡಿ.23: ಚುನಾವಣೆ ಪೂರ್ವದಲ್ಲಿ ರಾಜಕೀಯ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಐಟಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ ರಾಜಕೀಯ ನಾಯಕರ ವಿರುದ್ಧ ದಾಖಲಿಸಿದ್ದ ಎಫ್‍ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ತಮ್ಮ ವಿರುದ್ಧ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಡಿಕೆಶಿ, ಪರಮೇಶ್ವರ್ ಹಾಗೂ ಎಚ್‍ಡಿಕೆ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ಬುಧವಾರ ನ್ಯಾ. ಜಾನ್ ಮೈಕೆಲ್ ಕುನ್ಹ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲರು, ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡೆರಡು ಎಫ್‍ಐಆರ್ ದಾಖಲಿಸಿದ್ದಾರೆ. ಇದು ಕಾನೂನು ಬಾಹಿರ ಎಂದು ವಾದಿಸಿದರು. ವಾದ ಪುರಸ್ಕರಿಸಿದ ಪೀಠ, ಪೊಲೀಸರು ದಾಖಲಿಸಿದ್ದ ಎಫ್‍ಐಆರ್ ರದ್ದುಪಡಿಸಿ ಆದೇಶಿಸಿತು.

ಈ ಆದೇಶದಿಂದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.

ಕಳೆದ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಕೆಲ ದಿನಗಳ ಮುನ್ನ 2019ರ ಮಾರ್ಚ್ 28ರಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರಾಜ್ಯದ ವಿವಿಧೆಡೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿತ್ತು. ಇದನ್ನು ಖಂಡಿಸಿ ಅಂದಿನ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು.

ಈ ಸಂಬಂಧ ಎಚ್‍ಡಿಕೆ, ಡಿಕೆಶಿ, ಪರಮೇಶ್ವರ್, ದಿನೇಶ್ ಗುಂಡೂರಾವ್ ಸೇರಿದಂತೆ ಪ್ರತಿಭಟನೆ ನಡೆಸಿದ ರಾಜಕೀಯ ನಾಯಕರ ವಿರುದ್ಧ ದೂರು ದಾಖಲಿಸುವಂತೆ ಮಲ್ಲಿಕಾರ್ಜುನ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೂರು ದಾಖಲಿಸುವ ಸಂಬಂಧ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸರಿಗೆ ಸೂಚಿಸಿತ್ತು. ಅದರಂತೆ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಮುಖಂಡರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News