ರಾತ್ರಿ ಕರ್ಫ್ಯೂ ರದ್ದುಗೊಳಿಸಿದ ರಾಜ್ಯ ಸರಕಾರ

Update: 2020-12-24 14:53 GMT

ಬೆಂಗಳೂರು, ಡಿ.24: ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಡಿ.24ರಂದು ರಾತ್ರಿ 11 ಗಂಟೆಯಿಂದ ರಾತ್ರಿ ಕರ್ಫ್ಯೂವನ್ನು ಹೇರುವುದಾಗಿ ಘೋಷಿಸಿದ್ದ ಸರಕಾರವು, ನಾಟಕೀಯ ಬೆಳವಣಿಗೆಯೊಂದರಲ್ಲಿ ತನ್ನ ಆದೇಶ ಜಾರಿಯಾಗುವ ಆರು ಗಂಟೆ ಮುನ್ನವೇ ಹಿಂಪಡೆದಿದೆ.

ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಫ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು. ಸರಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಫ್ಯೂವಿನ ಅಗತ್ಯವಿಲ್ಲವೆಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸುರಕ್ಷಿತ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯುವಂತೆ ಮುಖ್ಯಮಂತ್ರಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ಬುಧವಾರ ಕೋವಿಡ್ ಸಾಂಕ್ರಾಮಿಕವನ್ನು ತಡೆಗಟ್ಟುವ ಸಂಬಂಧ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ಡಿ.23ರ ರಾತ್ರಿ 10 ಗಂಟೆಯಿಂದ ಜ.2ರ ಬೆಳಗ್ಗೆ 6 ಗಂಟೆಯವರೆಗೆ 9 ದಿನಗಳ ಕಾಲ ರಾತ್ರಿ ಕರ್ಫ್ಯೂ ಹೇರುತ್ತಿರುವುದಾಗಿ ಪ್ರಕಟಿಸಿದ ಮುಖ್ಯಮಂತ್ರಿ ಕೆಲವೇ ಗಂಟೆಗಳಲ್ಲಿ, ಕರ್ಫ್ಯೂ ಅವಧಿಯನ್ನು ಡಿ.24ರ ರಾತ್ರಿ 11 ಗಂಟೆಯಿಂದ ಜ.2ರ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ವಿಧಿಸುವುದಾಗಿ ಟ್ವೀಟ್ ಮಾಡಿದರು.

ರಾಜ್ಯ ಸರಕಾರವು ರಾತ್ರಿ ಕರ್ಫ್ಯೂ ಅವಧಿಯನ್ನು ರಾತ್ರಿ 11 ಗಂಟೆಯಿಂದ ಬೆಳಗ್ಗೆ 5ರವರೆಗೆ ಪರಿಷ್ಕರಿಸಿದ್ದು ಸರಿಯಲ್ಲ. ಸರಕಾರದ ಈ ತೀರ್ಮಾನ ಸಾರ್ವಜನಿಕ ವಲಯದಲ್ಲಿ ಅಪಹಾಸ್ಯಕ್ಕೆ ಒಳಗಾಗಿದೆ. ವಿರೋಧ ಪಕ್ಷಗಳು, ವಿವಿಧ ಸಂಘ ಸಂಸ್ಥೆಗಳು ಸರಕಾರದ ನಿರ್ಣಯವನ್ನು ಟೀಕಿಸಿದವು. ಅಲ್ಲದೆ, ರಾತ್ರಿ ಕರ್ಫ್ಯೂವನ್ನು ಸಾರ್ವಜನಿಕವಾಗಿ ಸಮರ್ಥಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಆಡಳಿತ ಪಕ್ಷದಲ್ಲಿನ ಹಿರಿಯ ಸಚಿವರು, ಮುಖಂಡರು ಮುಖ್ಯಮಂತ್ರಿ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ, ರಾತ್ರಿ ಕರ್ಫ್ಯೂ ವಿಚಾರದಲ್ಲಿ ಸಚಿವ ಸುಧಾಕರ್ ಏಕಪಕ್ಷೀಯವಾಗಿ ನಡೆದುಕೊಂಡ ರೀತಿಯ ಬಗ್ಗೆಯೂ ಹಲವು ಸಚಿವರು, ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News