×
Ad

ಆಗ್ನೇಯ ವಿಭಾಗದ ಪೊಲೀಸರ ಕಾರ್ಯಾಚರಣೆ: 90 ಲಕ್ಷರೂ. ಮೌಲ್ಯದ ಮಾಲು ಜಪ್ತಿ

Update: 2020-12-26 22:26 IST

ಬೆಂಗಳೂರು, ಡಿ.26: ಸರಗಳ್ಳತನ ಸೇರಿದಂತೆ ವಿವಿಧ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆಗ್ನೇಯ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ, 90 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.

ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನ ಆರೋಪಿಗಳನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿಸಿದರು.

ಪ್ರಮುಖವಾಗಿ ಸಂತೋಷ್ ಎಂಬಾತ, ಇಲ್ಲಿನ ಬಿಸ್ಮಿಲ್ಲಾ ನಗರದ ಸೆಯ್ಯದ್ ಇಸ್ಮಾಯಿಲ್ ಎಂಬುವರ ಮನೆಗೆ ನುಗ್ಗಿ 40ಲಕ್ಷ ಮೌಲ್ಯದ 85  ಗ್ರಾಂಚಿನ್ನ, 250 ಗ್ರಾಂ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ಪ್ರಕರಣ ಭೇದಿಸಲಾಗಿದೆ. ಆರೋಪಿ ಸಂತೋಷ್, ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾದರೂ ಜಾಮೀನಿನ ಮೇಲೆ ಬಿಡುಗಡೆಯಾಗಿ ಮತ್ತೆ ಕಳ್ಳತನದಲ್ಲಿ ಭಾಗಿಯಾಗುತ್ತಿರುವ ಮಾಹಿತಿ ಸುದ್ದುಗುಂಟೆಪಾಳ್ಯ ಪೊಲೀಸರು ನಡೆಸಿದ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ಮತ್ತೊಂದು ಪ್ರಕರಣದಲ್ಲಿ ಬೀಗ ಹಾಕಿದ ಮನೆಗಳಿಗೆ ನುಗ್ಗಿ ಕಳವು  ಮಾಡುತ್ತಿದ್ದ ಆರೋಪದಡಿ ಇಮ್ರಾನ್ ಅಹ್ಮದ್(30), ಹೊಂಗಸಂದ್ರದ ಝಮೀರ್(28), ಬಿಟಿಎಂ ಲೇಔಟ್‍ನ ಎ.ಪಾಷ(31) ಎಂಬುವರನ್ನು ಬಂಧಿಸಿ, 4 ಲಕ್ಷ 50 ಸಾವಿರ ಮೌಲ್ಯದ ಚಿನ್ನಾಭರಣಗಳನ್ನು ಸುದ್ದಗುಂಟೆಪಾಳ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇನ್ನು ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ತಿಲಕ್‍ನಗರ ಠಾಣಾ ಪೊಲೀಸರು 20 ಲಕ್ಷ ಮೌಲ್ಯದ 19 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅದೇರೀತಿ, ಒಂಟಿ ಮಹಿಳೆಯರನ್ನು ಗುರುತಿಸಿ ಸರಗಳ್ಳತನ ಮಾಡುತ್ತಿದ್ದ ಸಂಜಯ್ ಎಂಬಾತನನ್ನು ಬಂಧಿಸಿ 5 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಲಾಗಿದೆ ಎಂದು ಆಯುಕ್ತರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್, ಡಿಸಿಪಿ ಶ್ರೀನಾಥ್ ಮಹದೇವಜೋಷಿ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News