×
Ad

ನಾಯಕತ್ವ ಬದಲಾವಣೆ ಇಲ್ಲ: ಸಚಿವ ರಮೇಶ್ ಜಾರಕಿಹೊಳಿ

Update: 2020-12-26 23:38 IST

ಬೆಳಗಾವಿ, ಡಿ. 26: `ರಾಜ್ಯದಲ್ಲಿ ಇನ್ನೂ ಎರಡೂವರೆ ವರ್ಷ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಈಗಾಗಲೇ ಸ್ಪಷ್ಟಪಡಿಸಿದ್ದು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವೈಯಕ್ತಿಕ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ' ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇನ್ನೂ ಎರಡೂವರೇ ವರ್ಷ ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಖುದ್ದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೇ ಈಗಾಗಲೇ ಸ್ಪಷ್ಟಣೆ ನೀಡಿದ್ದು, ಈ ಸಂಬಂಧದ ಹೇಳಿಕೆಗಳಿಗೆ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಪ್ರತಿಕ್ರಿಯೆ ನೀಡಿದರು.

ಬೆಳಗಾವಿ ಮಹಾನಗರ ಪಾಲಿಕೆ ಸಮಸ್ಯೆಯೇ ಬೇರೆ. ಮಂಗಳೂರು, ಬೆಂಗಳೂರು ಪಾಲಿಕೆಗಳು ಬೇರೆ. ಹೀಗಾಗಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷರು, ಪಕ್ಷದ ವರಿಷ್ಟರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಮಾಡಲಾಗುವುದು ಎಂದ ಅವರು, ಕೋವಿಡ್ ಹಿನ್ನೆಲೆ ಪಾಲಿಕೆಗೆ ಬರಬೇಕಿರುವ 125 ಕೋಟಿ ರೂ.ಅನುದಾನ ಬಿಡುಡಗೆ ವಿಳಂಬವಾಗಿದೆ. ಆದಷ್ಟು ಶೀಘ್ರವೇ ಅನುದಾನ ಬಿಡುಗಡೆಯಾಗಲಿದೆ ಎಂದರು.

ಇದೇ ವೇಳೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮತ್ತೊಂದು ಅಣೆಕಟ್ಟು ನಿರ್ಮಾಣದ ಬಗ್ಗೆ ಚಿಂತನೆ ಇದೆ. ಆದರೆ, ಇದೀಗ ಗ್ರಾಮ ಪಂಚಾಯತಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಆ ಬಳಿಕ ಉತ್ತರ ಕ್ಷೇತ್ರದ ಶಾಸಕರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಣೆಕಟ್ಟು ನಿರ್ಮಾಣ ಮಾಡುವ ಮೂಲಕ ನೀರಾವರಿಗೆ ಒತ್ತು ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News