ಕೇರಳ: ಬ್ರಿಟನ್‌ನಿಂದ ವಾಪಸಾದ 18 ಮಂದಿಯಲ್ಲಿ ಕೊರೋನ ಸೋಂಕು ದೃಢ

Update: 2020-12-29 14:24 GMT

ತಿರುವನಂತಪುರಂ, ಡಿ.29: ಬ್ರಿಟನ್‌ನಿಂದ ವಾಪಸಾದ 18 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿರುವುದಾಗಿ ಕೇರಳ ಆರೋಗ್ಯ ಸಚಿವೆ ಕೆಕೆ ಶೈಲಜಾ ಹೇಳಿದ್ದಾರೆ.

ದೀರ್ಘಕಾಲದ ಅಸೌಖ್ಯದಿಂದ ಬಳಲುತ್ತಿರುವ ಹಿರಿಯ ನಾಗರಿಕರು ಜಾಗರೂಕತೆ ವಹಿಸಬೇಕು. ಬ್ರಿಟನ್‌ನಲ್ಲಿ ರೂಪಾಂತರಿತ ಕೊರೋನ ಪತ್ತೆಯಾದ ಬಳಿಕ, ಆ ದೇಶದಿಂದ ಕೇರಳಕ್ಕೆ ಆಗಮಿಸುವವರನ್ನು ಕ್ವಾರಂಟೈನ್‌ಗೆ ಒಳಪಡಿಸಲು ವ್ಯವಸ್ಥೆ ಮಾಡಲಾಗಿದೆ. ಇದಕ್ಕೂ ಮುನ್ನ ಬ್ರಿಟನ್‌ನಿಂದ ಆಗಮಿಸಿದ 8 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟ ಬಳಿಕ ಅವರ ಗಂಟಲುದ್ರವ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಗೆ ರವಾನಿಸಲಾಗಿದೆ. ರಾಜ್ಯದ ನಾಲ್ಕು ಅಂತರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಕಣ್ಗಾವಲು ವ್ಯವಸ್ಥೆ ಬಿಗಿಗೊಳಿಸಲಾಗಿದೆ ಎಂದು ಸಚಿವೆ ಹೇಳಿದ್ದಾರೆ.

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಳಿಕ ರಾಜ್ಯದಲ್ಲಿ ಕೊರೋನ ಸೋಂಕು ಪ್ರಕರಣ ಹೆಚ್ಚುವ ಅಪಾಯವಿದೆ ಎಂದು ಆರೋಗ್ಯ ಇಲಾಖೆ ಎಚ್ಚರಿಸಿತ್ತು. ಆದರೆ ಸರಕಾರ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವುದರಿಂದ ಸೋಂಕಿನ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿಲ್ಲ ಎಂದವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News