ಗ್ರಾಮ ಪಂಚಾಯತ್ ಚುನಾವಣೆ ಮತ ಎಣಿಕೆ ಆರಂಭ

Update: 2020-12-30 03:54 GMT

ಮಂಗಳೂರು, ಡಿ.30: ರಾಜ್ಯದಲ್ಲಿ ಡಿ.22 ಮತ್ತು 27 ರಂದು ಎರಡು ಹಂತಗಳಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ ಆರಂಭವಾಗಿದ್ದು, ಮತ ಎಣಿಕೆ ನಡೆಯುವ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಪ್ರತಿ ಮತ ಎಣಿಕೆ ಕೇಂದ್ರದಲ್ಲೂ ಮತ ಎಣಿಕೆಗಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯತ್ ನ ಮತ ಎಣಿಕೆಗೆ ಟೇಬಲ್‍ಗಳನ್ನು ನಿಗದಿಪಡಿಸಲಾಗಿದೆ. ಕೊರೋನ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದಲ್ಲೂ ನಿಯಮಗಳನ್ನು ಪಾಲಿಸಲಾಗುತ್ತಿದ್ದು, ಮತ ಎಣಿಕೆ ಕೇಂದ್ರದ ಬಳಿ ಜನ ಗುಂಪುಗೂಡದಂತೆ, ಎಚ್ಚರಿಕೆ ವಹಿಸಲಾಗಿದೆ. ಗೆದ್ದ ಅಭ್ಯರ್ಥಿಯ ವಿಜಯೋತ್ಸವ ಆಚರಣೆಗೂ ನಿರ್ಬಂಧ ಹೇರಲಾಗಿದೆ.

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯಲ್ಲಿ ಶೇ. 82.04 ರಷ್ಟು ಹಾಗೂ ಎರಡನೇ ಹಂತದ ಚುನಾವಣೆಯಲ್ಲಿ ಶೇ. 80.71 ರಷ್ಟು ಮತದಾನ ಆಗಿದೆ.

ಡಿ.22 ರಂದು ನಡೆದ ಮೊದಲ ಹಂತದಲ್ಲಿ ರಾಜ್ಯದ 3,019 ಗ್ರಾಮ ಪಂಚಾಯತ್ ಗಳ 43,238 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು 1,17,383 ಅಭ್ಯರ್ಥಿಗಳು ಕಣದಲ್ಲಿದ್ದರು. 4,377 ಕ್ಷೇತ್ರಗಳಿಗೆ ಅವಿರೋಧ ಆಯ್ಕೆಯಾಗಿದ್ದರು. ಡಿ. 27 ರಂದು 2,709 ಗ್ರಾಮ ಪಂಚಾಯತ್ ನ 39,378 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಚುನಾವಣೆಯಲ್ಲಿ 1,05,431 ಅಭ್ಯರ್ಥಿಗಳು ಕಣದಲ್ಲಿದ್ದರು. 3,697 ಕ್ಷೇತ್ರಗಳಿಗೆ ಅವಿರೋಧ ಆಯ್ಕೆಯಾಗಿದೆ. 216 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News