ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಜಾರಿ ಅಗತ್ಯವಿದೆ; ಸಿಎಂ‌ ಜತೆ ಚರ್ಚಿಸಿ ತೀರ್ಮಾನ: ಸಚಿವ ಆರ್.ಅಶೋಕ್

Update: 2020-12-30 12:22 GMT

ಬೆಂಗಳೂರು, ಡಿ.30: ರೂಪಾಂತರ ಕೊರೋನ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರುವ ಅಗತ್ಯವಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಇಂದಿಲ್ಲಿ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೂಪಾಂತರಿ ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸಲು ಮತ್ತಷ್ಟು ನಿರ್ಬಂಧಗಳನ್ನು ಹೇರುವ ಅಗತ್ಯವಿದೆ. ರಾತ್ರಿ ಕರ್ಫ್ಯೂ ಜಾರಿ ಮಾಡುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಮತ್ತೆ ಲಾಕ್‍ಡೌನ್ ಜಾರಿ ಮಾಡಬೇಕಾದ ಪರಿಸ್ಥಿತಿ ಇಲ್ಲ. ಆದರೆ, ಸೋಂಕು ಹರಡುವುದನ್ನು ತಡೆಗಟ್ಟುವ ದೃಷ್ಟಿಯಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲೇಬೇಕಾದ ಅಗತ್ಯವಿದೆ ಎಂದು ಸಚಿವ ಅಶೋಕ್ ತಿಳಿಸಿದರು.

ಬ್ರಿಟನ್ ರೂಪಾಂತರ ಕೊರೋನ ಸೋಂಕು ನಿಯಂತ್ರಣಕ್ಕಾಗಿ ರಾತ್ರಿ ಕರ್ಫ್ಯೂ ಹೇರುವುದು ಹಾಗೂ ಮತ್ತೆ ಲಾಕ್‍ಡೌನ್ ಜಾರಿಗೊಳಿಸುವ ಸಂಬಂಧ ಸಿಎಂ ತೀರ್ಮಾನ ಮಾಡಲಿದ್ದಾರೆ ಎಂದ ಅವರು, ಸದ್ಯಕ್ಕೆ ಲಾಕ್‍ಡೌನ್ ಮಾಡುವ ಪ್ರಸ್ತಾವನೆಯೂ ಸರಕಾರದ ಮುಂದಿಲ್ಲ. ಆದರೆ, ಸೋಂಕು ಹೆಚ್ಚಾದರೆ ಆಗ ಸಂಬಂಧಿಸಿದ ಜಿಲ್ಲೆಗಳಲ್ಲಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದರು.

ಬಿಜೆಪಿ ಶಕ್ತಿ ಕಾಣುತ್ತಿದೆ: ರಾಜ್ಯದ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಎಲ್ಲೆಡೆ ಬಿಜೆಪಿ ಶಕ್ತಿ ಎದ್ದು ಕಾಣುತ್ತಿದೆ ಎಂದ ಅಶೋಕ್, ಗ್ರಾಮ ಪಂಚಾಯತ್ ಮಟ್ಟದಲ್ಲಿ ಬಿಜೆಪಿ ಹಿಡಿತ ಸಾಧಿಸುತ್ತಿದ್ದು, ಪ್ರತಿಪಕ್ಷ ಕಾಂಗ್ರೆಸ್‍ಗೆ ಹಿನ್ನಡೆ ಕಂಡುಬರುತ್ತಿದೆ ಎಂದರು.

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಇದು ಮುಂದೆ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಲು ಹಾಗೂ ಜನರ ಧ್ವನಿಯಾಗಿ ನಾವು ಕೆಲಸ ಮಾಡಲು ಉತ್ತೇಜನ ನೀಡಿದಂತಾಗಿದೆ ಎಂದು ಸಚಿವ ಅಶೋಕ್ ಇದೇ ವೇಳೆ ತಿಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News