ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಿ: ಡಿಸಿ ಡಾ. ರಾಜೇಂದ್ರ
ಮಂಗಳೂರು, ಡಿ.30: ನಗರಗಳಲ್ಲಿ ಮಳೆ ನೀರು ಕೊಯ್ಲು (ನೀರು ಇಂಗಿಸುವ) ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಅಂತರ್ಜಲವನ್ನು ಹೆಚ್ಚಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಅಧಿಕಾರಿಗಳಿಗೆ ಸೂಚಿಸಿದರು.
ದ.ಕ.ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಈಗಾಗಲೇ ಕಟ್ಟಡ, ಬಹಮಹಡಿ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆಯಿದ್ದು, ಇವುಗಳಲ್ಲಿ ಸಮರ್ಪಕವಾಗಿ ನೀರು ಇಂಗಿಸುವ ಪ್ರಕ್ರಿಯೆ ಆಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು. ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆಯನ್ನು ರೂಪಿಸುವವರಿಗೆ ಮಾತ್ರ ಕಟ್ಟಡ ಪರವಾನಿಗೆಯನ್ನು ನೀಡಬೇಕು ಎಂದರು.
ಮುಂದಿನ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಲಭ್ಯ ವಿರುವ ಪರ್ಯಾಯ ನೀರಿನ ಮೂಲಗಳನ್ನು ಸಂರಕ್ಷಿಸಿ, ಪುನರುಜ್ಜೀವನಗೊಳಿಸಬೇಕು ಎಂದ ಡಿಸಿ, ಪೈಪ್‌ಲೈನ್ ಅಳವಡಿಕೆ ಸಹಿತ ಇನ್ನಿತರ ಕಾಮಗಾರಿಗಳನ್ನು ಶೀಘ್ರದಲ್ಲಿ ಕೈಗೊಂಡು ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಜಲ ಸಂರಕ್ಷಣೆಯ ಕುರಿತು ಗ್ರಾಮ, ತಾಲೂಕು ಹಾಗೂ ನಗರಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿಬೇಕು. ಅನವಶ್ಯಕವಾಗಿ ನೀರನ್ನು ಪೋಲು ಮಾಡುವುದು, ಮಲಿನಗೊಳಿಸುವುದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಪಾಲಿಕೆಯ ವ್ಯಾಪ್ತಿಯಲ್ಲಿರುವ ಬೋರ್‌ವೆಲ್ಗಳು, ಓವರ್ ಹೆಡ್ ಟ್ಯಾಂಕ್‌ಗಳಲ್ಲಿ ಶೇಖರಣೆ ಆಗುವ ನೀರಿನ ಪ್ರಮಾಣದ ಮಾಹಿತಿ ಪಡೆದ ಅವರು ಸಾರ್ವಜನಿಕರಿಗೆ ಹಾಗೂ ಉದ್ಯಮಿಗಳಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಗಾಯತ್ರಿ ಎಸ್. ನಾಯಕ್, ಪಾಲಿಕೆಯ ಉಪ ಆಯುಕ್ತ ಡಾ. ಸಂತೋಷ್ ಕುಮಾರ್ ಉಪಸ್ಥಿತರಿದ್ದರು.