ಶೇ.60ಕ್ಕೂ ಹೆಚ್ಚು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು: ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು, ಡಿ. 31: ರಾಜ್ಯದ ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಶೇ.60ಕ್ಕೂ ಹೆಚ್ಚು ಸ್ಥಾನಗಳಲ್ಲಿ ಆಯ್ಕೆಯಾಗಿದ್ದು, ಪಕ್ಷ ಅಭೂತಪೂರ್ವ ಸಾಧನೆ ಮಾಡಿದೆ. ಒಟ್ಟು 5,728 ಗ್ರಾಪಂಗಳ ಪೈಕಿ ಅತಿಹೆಚ್ಚು 3,800 ಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ದೊಡ್ಡಸಂಖ್ಯೆಯಲ್ಲಿ ಜಯಗಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದಿಲ್ಲಿ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ರೈತರ ಶ್ರೇಯೋಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು 2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸಲು ರೈತಪರ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ. ಹೀಗಾಗಿ ಈ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಪ್ರತಿಭಟನೆಯನ್ನು ಹಿಂಪಡೆಯಬೇಕು ಎಂದು ಕೋರಿದರು.
ರಾಜ್ಯದಲ್ಲಿ ಕೊರೋನ ಸೋಂಕಿನ ಸಾಂಕ್ರಾಮಿಕ ರೋಗದ ಹಾವಳಿ ನಡುವೆಯೂ ಅಭಿವೃದ್ಧಿಯ ವೇಗ ಮುನ್ನೆಡೆಯುವಂತೆ ನೋಡಿಕೊಳ್ಳಲಾಗಿದೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ತೊಂದರೆಗೊಳಗಾದ ರೈತರು, ಹೂವು ಬೆಳೆಗಾರರು, ಕಾರ್ಮಿಕರು, ಕಟ್ಟಡ ಕಾರ್ಮಿಕರು, ರಿಕ್ಷಾ ಚಾಲಕರು, ಅಸಂಘಟಿತ ವರ್ಗದವರಿಗೆ ಸರಕಾರ ಪರಿಹಾರ ನೀಡುವ ಮೂಲಕ ಅವರ ಹಿತಾಸಕ್ತಿ ಕಾಪಾಡಿದೆ ಎಂದು ಯಡಿಯೂರಪ್ಪ ತಿಳಿಸಿದರು.
ಇಡೀ ದೇಶದಲ್ಲೇ ಕರ್ನಾಟಕ ರಾಜ್ಯವನ್ನು ಅಭಿವೃದ್ಧಿಯಲ್ಲಿ ನಂ.1 ಸ್ಥಾನಕ್ಕೇರಿಸುವ ಕನಸು ತಮ್ಮದು. ಆ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ, ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಕೋವಿಡ್-19 ಪರಿಸ್ಥಿತಿ, ಬರಗಾಲ, ಅತಿವೃಷ್ಟಿಯಂತಹ ಅಗ್ನಿಪರೀಕ್ಷೆಯ ನಡುವೆಯೂ ರಾಜ್ಯ ಸರಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಯಡಿಯೂರಪ್ಪ ಹೇಳಿದರು.
ಬೆಂಗಳೂರಿನ ಚಿತ್ರಣ ಬದಲು: ಮುಂದಿನ ಒಂದು ವರ್ಷದಲ್ಲಿ ಬೆಂಗಳೂರು ನಗರದ ಅಭಿವೃದ್ಧಿಯ ಚಿತ್ರಣವೇ ಬದಲಾಗಲಿದೆ ಎಂದ ಯಡಿಯೂರಪ್ಪ, ಬೆಂಗಳೂರಿನ ಅಭಿವೃದ್ಧಿಗಾಗಿಯೇ ’ಬೆಂಗಳೂರು ಮಿಷನ್-2022’ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಗೆ ಹೆಚ್ಚಿನ ಹಣ ಒದಗಿಸಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ, ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.